ಪೊಲೀಸ್ ಭವನ ಕಾಮಗಾರಿ ಚುರುಕಿಗೆ ಸಿಎಂ ಸೂಚನೆ

ಬೆಂಗಳೂರು, ಅ.21: ಕೋರಮಂಗಲದ ಕೆಎಸ್‌ಆರ್‌ಪಿ ಮೈದಾನದಲ್ಲಿ ನನೆಗುದಿಗೆ ಬಿದ್ದಿರುವ ಪೊಲೀಸ್ ಭವನದ (ಕಲ್ಯಾಣ ಮಂಟಪ) ನಿರ್ಮಾಣ ಕಾಮಗಾರಿ ಶೀಘ್ರವಾಗಿ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಶನಿವಾರ ಇಲ್ಲಿನ ಕೋರಮಂಗಲದ ಕೆಎಸ್‌ಆರ್‌ಪಿ ಮೈದಾನದಲ್ಲಿ ರಾಜ್ಯ ಗೃಹ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಪೊಲೀಸ್ ಸಂಸ್ಮರಣ ದಿನಾಚರಣೆಯಲ್ಲಿ ಪಾಲ್ಗೊಂಡು, ಹುತಾತ್ಮ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿ ಬಳಿಕ ಕಲ್ಯಾಣ ಮಂಟಪದ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಕಾಮಗಾರಿ ವಿಳಂಬಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.
2008ರಲ್ಲೇ ಕಾಮಗಾರಿ ಆರಂಭವಾಗಿದ್ದರೂ ಇನ್ನು ಪೂರ್ಣಗೊಂಡಿಲ್ಲವೇಕೆ ಎಂದು ಪ್ರಶ್ನಿಸಿದ ಅವರು, ಕಲ್ಯಾಣ ಮಂಟಪ ನಿರ್ಮಾಣವಾದರೆ 2,500 ಪೊಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬದವರಿಗೆ ಅನುಕೂಲವಾಗುತ್ತದೆ. ಹೀಗಾಗಿ, ಸ್ಥಗಿತಗೊಂಡಿರುವ ಕಾಮಗಾರಿಯನ್ನು ತಕ್ಷಣ ಆರಂಭಿಸಿ ನಿಗದಿತ ಸಮಯಕ್ಕೆ ಪೂರ್ಣಗೊಳಿಸಿ ಎಂದು ರಾಜ್ಯ ಸಶಸ್ತ್ರ ಮೀಸಲು ಪಡೆಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಭಾಸ್ಕರ್ ರಾವ್ ಅವರಿಗೆ ಸಿಎಂ ಸೂಚಿಸಿದರು.





