ಕೇಂದ್ರ, ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್
ಖಾಸಗಿ ಅನುದಾನರಹಿತ ಶಾಲೆಗಳ ಮೂಲಸೌಕರ್ಯ ಕುರಿತು ಅಧಿಸೂಚನೆ
ಬೆಂಗಳೂರು, ಅ.27: ಪೂರ್ವ ಪ್ರಾಥಮಿಕ ಹಂತದಿಂದ 10ನೆ ತರಗತಿವರೆಗಿನ ಖಾಸಗಿ ಅನುದಾನರಹಿತ ಶಾಲೆಗಳು ಹೊಂದಿರಬೇಕಾದ ಮೂಲಸೌಕರ್ಯಗಳ ಕುರಿತ ಅಧಿಸೂಚನೆ ಪ್ರಶ್ನಿಸಿರುವ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಈ ಕುರಿತಂತೆ ಬೆಂಗಳೂರಿನ ಕರ್ನಾಟಕ ಅನುದಾನರಹಿತ ಶಾಲಾ ಆಡಳಿತ ಮಂಡಳಿಗಳ ಸಂಘ ಮತ್ತು ಧಾರವಾಡದ ಬಾಲಾಜಿ ಎಜುಕೇಷನ್ ಸೊಸೈಟಿ ಸೇರಿ ಒಟ್ಟು ಐದು ಶಿಕ್ಷಣ ಸಂಸ್ಥೆಗಳು ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
ಪ್ರತಿವಾದಿಗಳಾದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಬೆಂಗಳೂರು ನಗರ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಲು ನ್ಯಾಯಪೀಠ ಆದೇಶಿಸಿದೆ.
ಅರ್ಜಿದಾರರ ವಕೀಲ ಕೆ.ವಿ.ಧನಂಜಯ, ಕರ್ನಾಟಕ ಶಿಕ್ಷಣ ಕಾಯ್ದೆ1983ಕ್ಕೆ ತಿದ್ದುಪಡಿ ತರುವ ಮೂಲಕ ರಾಜ್ಯ ಸರಕಾರ 2014ರ ನವೆಂಬರ್ 11ರಂದು ಅಧಿಸೂಚನೆ ಹೊರಡಿಸಿತ್ತು. ಸರಕಾರ ಈ ಅಧಿಸೂಚನೆ ಹೊರಡಿಸುವ ಮುನ್ನ ಸಾರ್ವಜನಿಕರ ಆಕ್ಷೇಪಣೆ ಆಲಿಸಿಲ್ಲ. ಹೀಗಾಗಿ, ಈ ಆದೇಶವನ್ನು ರದ್ದುಪಡಿಸಬೇಕು ಎಂದು ಕೋರಿದರು.
ಹೊಸ ಅಧಿಸೂಚನೆ ಅನ್ವಯ ಗ್ರಾಮೀಣ ಪ್ರದೇಶದ ಶಾಲೆಗಳು ಎರಡು ಎಕರೆ ಜಾಗ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿನ ಶಾಲೆಗಳು ಒಂದೂವರೆ ಎಕರೆ ಹಾಗೂ ಬೆಂಗಳೂರು ಸೇರಿದಂತೆ ಪಾಲಿಕೆ ವ್ಯಾಪ್ತಿಯ ಶಾಲೆಗಳು ಒಂದು ಎಕರೆ ಜಮೀನು ಹೊಂದಬೇಕು ಎಂದು ಹೇಳಿತ್ತು. ಇದಕ್ಕೆ 2015ರಲ್ಲಿ ಕೊಂಚ ಮಾರ್ಪಾಡು ಮಾಡಿ, ಇದರ ಅನುಷ್ಠಾನ ಕಡ್ಡಾಯ ಎಂದು ಆದೇಶಿಸಿದೆ. ಆದರೆ, ಇದು ಕಾನೂನಿಗೆ ವಿರೋಧವಾಗಿದೆ ಎಂದರು.
ಈ ಆದೇಶದಿಂದಾಗಿ ಕಳೆದ ಮೂರು ವರ್ಷಗಳಲ್ಲಿ ರಾಜ್ಯದಾದ್ಯಂತ 800 ಹೊಸ ಶಾಲೆಗಳ ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಅಂತೆಯೇ ಈಗಿರುವ ಶಾಲೆಗಳನ್ನು ಮೇಲ್ದರ್ಜೆಗೆ ಏರಿಸಲು ಸಾಧ್ಯವಾಗುತ್ತಿಲ್ಲ ಎಂದು ಆಕ್ಷೇಪಿಸಿದರು.







