ಕೊರಟಗೆರೆ ಕ್ಷೇತ್ರದಿಂದಲೇ ಡಾ.ಜಿ.ಪರಮೇಶ್ವರ್ ಸ್ಪರ್ಧೆ: ರಾಮಕೃಷ್ಣ

ತುಮಕೂರು, ಅ.28: ಕಳೆದ 7ವರ್ಷಗಳಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಾ ಪಕ್ಷವನ್ನು ಅಧಿಕಾರಕ್ಕೆ ತರಲು ನಿರಂತರ ಪ್ರಯತ್ನ ನಡೆಸುತ್ತಿರುವ ಡಾ.ಜಿ.ಪರಮೇಶ್ವರ್ 2018ರ ವಿಧಾನಸಭಾ ಚುನಾವಣೆಯಲ್ಲಿ ಕೊರಟಗೆರೆ ಕ್ಷೇತ್ರದಿಂದ ಸ್ಪರ್ಧೆಗೆ ಇಳಿಯಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಒಂದು ಪಕ್ಷವನ್ನು ಸತತವಾಗಿ 7 ವರ್ಷಗಳ ಕಾಲ ನಡೆಸಿದ ಇತಿಹಾಸ ರಾಷ್ಟ್ರದಲ್ಲಿಯೇ ಇಲ್ಲ. ಸತತ 7 ವರ್ಷ ಪೂರೈಸಿ ಎಂಟನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಸತತವಾಗಿ ಎಂಟು ವರ್ಷಗಳ ಕಾಲ ಪಕ್ಷದ ರಾಜ್ಯಾಧ್ಯಕ್ಷರಾಗಿ ಕೆಲಸ ಮಾಡಲು ಅವಕಾಶ ಕಲ್ಪಿಸಿದ ಎಐಸಿಸಿ ಅಧ್ಯಕ್ಷರಿಗೆ, ಉಪಾಧ್ಯಕ್ಷರಿಗೆ ಹಾಗೂ ಮುಖ್ಯಮಂತ್ರಿ ಮತ್ತು ಇತರೆ ಮುಖಂಡರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.
ಕೆಪಿಸಿಸಿ ಅಧ್ಯಕ್ಷರಾಗಿ ಪರಮೇಶ್ವರ್ ಅವರು ಜಾರಿಗೆ ತಂದ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಯಶಸ್ವಿಯಾಗಿದೆ. 2013ರ ಚುನಾವಣೆಗೂ ಮುನ್ನ ಹಮ್ಮಿಕೊಂಡಿದ್ದ ಮೈಸೂರುನಿಂದ ಬಳ್ಳಾರಿ ಪಾದಯಾತ್ರೆ, ಕಾಂಗ್ರೆಸ್ ನಡಿಗೆ ಕೃಷ್ಣ ಕಡೆಗೆ ಹೀಗೆ ಹತ್ತು ಹಲವು ಕಾರ್ಯಕ್ರಮಗಳ ಮೂಲಕ ಪಕ್ಷವನ್ನು ಬಲಪಡಿಸಿ, ಪಕ್ಷ ಅಧಿಕಾರಕ್ಕೆ ಬರುವಂತೆ ಮಾಡಿದ್ದಾರೆ. ರಾಜ್ಯಸರಕಾರ ಜಾರಿಗೆ ತಂದ ಎಲ್ಲಾ ಕಾರ್ಯಕ್ರಮಗಳಿಗೂ ಬೆನ್ನೆಲುಬಾಗಿ ನಿಂತು ಸರಕಾರದ ಸವಲತ್ತು ಜನರಿಗೆ ತಲುಪವಂತೆ ಕಾರ್ಯಕರ್ತರನ್ನು ಹುರಿದುಂಬಿಸಿದ್ದಾರೆಂದು ನುಡಿದರು.
ಕರ್ನಾಟಕ ರಾಜ್ಯ ಕೌಶಲ್ಯಾಭಿವೃದ್ದಿ ಮಂಡಳಿ ಅಧ್ಯಕ್ಷ ಮುರುಳೀಧರ ಹಾಲಪ್ಪ ಮಾತನಾಡಿ, ಸತತವಾಗಿ ಲೋಕಸಭಾ ಮತ್ತು ಎರಡು ವಿಧಾನಸಭಾ ಚುನಾವಣೆಗಳಲ್ಲಿ ಒಂದು ಪಕ್ಷದ ಅಧ್ಯಕ್ಷರಾಗಿ ದಾಖಲೆ ನಿರ್ಮಿಸಿದವರು ಡಾ.ಜಿ.ಪರಮೇಶ್ವರ್, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಯಾವುದೇ ಗೊಂದಲವಿಲ್ಲದೆ ಮುನ್ನೆಡೆಸಿಕೊಂಡು ಹೋಗುತ್ತಿದ್ದಾರೆ. ಅವರು ಮುಂದಿನ ಚುನಾವಣೆಯಲ್ಲಿ ಗೆಲುವು ಸಾಧಿಸಬೇಕೆಂಬುದು ಅವರ ಅನುಯಾಯಿಗಳಾದ ನೆಮ್ಮಲ್ಲರ ಬಯಕೆ ಎಂದರು.
ಸುದ್ದಿಗೋಷ್ಠಿಯಲ್ಲಿ ಟೂಡಾ ಮಾಜಿ ಅಧ್ಯಕ್ಷ ರೆಡ್ಡಿ ಚಿನ್ನಯಲ್ಲಪ್ಪ, ಮುಖಂಡರಾದ ನರಸೀಯಪ್ಪ, ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಇಕ್ಬಾಲ್ ಅಹಮದ್, ಮುಸ್ತಾಕ್ ಅಹ್ಮದ್, ಶಂಕರ್, ಎಚ್.ಎಸ್.ಹೇಮಂತಕುಮಾರ್ ಮತ್ತಿತರರು ಉಪಸ್ಥಿತರಿದ್ದರು.







