ಕನ್ನಡ ಶಾಲೆಗಳ ಸಬಲೀಕರಣ, ಗುಣಮಟ್ಟ ವೃದ್ಧಿ ಅಗತ್ಯ: ಸಚಿವ ಪ್ರಮೋದ್ ಮಧ್ವರಾಜ್

ಉಡುಪಿ, ನ.1: ಕನ್ನಡ ಶಾಲೆಗಳನ್ನು ಉಳಿಸುವ ಮತ್ತು ಬೆಳೆಸುವ ಬಗ್ಗೆ ನಾವು ಇಂದು ಗಂಭೀರ ಚಿಂತನೆ ಮಾಡಬೇಕಾಗಿದೆ. ಆಂಗ್ಲ ಭಾಷೆಯ ಭ್ರಮೆ ಯಿಂದಾಗಿ ಕೆಲವು ಪ್ರದೇಶಗಳ ಕನ್ನಡ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕನ್ನಡ ಶಾಲೆಗಳ ಗುಣಮಟ್ಟವನ್ನು ಏರಿಸ ಬೇಕಾಗಿದೆ. ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಗಟ್ಟಿ ಗೊಳಿಸಲು ಕನ್ನಡ ಶಾಲೆಗಳನ್ನು ಸಬಲೀಕರಣಗೊಳಿಸುವುದು ಅಗತ್ಯ ಎಂದು ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಅಭಿಪ್ರಾಯಪಟ್ಟಿದ್ದಾರೆ.
ಉಡುಪಿ ಜಿಲ್ಲಾಡಳಿತದ ವತಿಯಿಂದ ಬುಧವಾರ ಬೀಡಿನಗುಡ್ಡೆ ಮಹಾತ್ಮ ಗಾಂಧಿ ಬಯಲು ರಂಗ ಮಂದಿರದಲ್ಲಿ ಆಯೋಜಿಸಲಾದ ಜಿಲ್ಲಾಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಕನ್ನಡ ರಾಜ್ಯೊೀತ್ಸವ ಸಂದೇಶವನ್ನು ನೀಡಿದರು.
ಆಂಗ್ಲ ಭಾಷೆಯಿಂದ ಕನ್ನಡಕ್ಕಿರುವ ಅಪಾಯಕ್ಕಿಂತಲೂ ಆಂಗ್ಲ ಭಾಷೆಯ ಕುರಿತ ಭ್ರಮೆ ಬಹಳ ಅಪಾಯಕಾರಿಯಾಗಿದೆ. ಇಂದು ಏಕರೂಪದ ಶಿಕ್ಷಣದ ಅಗತ್ಯದ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಶೈಕ್ಷಣಿಕ ಅಸಮಾನತೆಯನ್ನು ಹೋಗ ಲಾಡಿಸಲು ಈ ಬಗ್ಗೆ ದಿಟ್ಟ ಕ್ರಮ ಕೈಗೊಳ್ಳಬೇಕಾಗಿದೆ. ಇದಕ್ಕೆ ಜನಾಭಿಪ್ರಾಯ ರೂಪುಗೊಳ್ಳಬೇಕು. ಕನ್ನಡದ ಬೆಳವಣಿಗೆಯ ದೃಷ್ಠಿಯಿಂದ ಇದು ಅಗತ್ಯ ಎಂದು ಅವರು ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೂಲಕ ಕನ್ನಡ ಬೆಳೆಸಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಯುವಜನರಲ್ಲಿ ಕನ್ನಡ ಭಾಷೆಯ ಪ್ರೀತಿಯನ್ನು ಹುಟ್ಟಿಸುವ ಕಾರ್ಯಕ್ರಮಗಳಿಗೆ ಅನುದಾನವನ್ನು ಒದಗಿಸಲಾಗಿದೆ. ಎಲ್ಲ ಕಚೇರಿ ಗಳಲ್ಲಿ ಕನ್ನಡವನ್ನು ಶೇ.100ರಷ್ಟು ಅನುಷ್ಠಾನಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.
ಘನ ಮತ್ತು ದ್ರವ ಸಂಪನ್ಮೂಲ ನಿರ್ವಹಣೆ ಕಾರ್ಯಕ್ರಮದಡಿ ಸುಮಾರು 650 ಸ್ವಯಂ ಸೇವಕರಿಗೆ ತ್ಯಾಜ್ಯಗಳನ್ನು ಸಂಪನ್ಮೂಲವನ್ನಾಗಿ ಪರಿವರ್ತಿಸುವ ಬಗ್ಗೆ ತರಬೇತಿ ನೀಡಲಾಗಿದ್ದು, ವಾರಂಬಳ್ಳಿ, ವಂಡ್ಸೆ, ನಿಟ್ಟೆ ಗ್ರಾಪಂಗಳನ್ನು ಆಯ್ಕೆ ಮಾಡಿ ಕಾರ್ಯಕ್ರಮ ಪ್ರಾರಂಭಿಸಲಾಗಿದೆ. 2018ರ ಅ.2ಕ್ಕೆ ಜಿಲ್ಲೆಯನ್ನು ಸಂಪೂರ್ಣವಾಗಿ ತ್ಯಾಜ್ಯ ಮುಕ್ತ ಜಿಲ್ಲೆಯನ್ನಾಗಿ ಘೋಷಿಸಲು ಯೋಜನೆ ರೂಪಿಸಲಾಗಿದೆ. ಮಲ್ಪೆ ಬಂದರಿನ ವಿಸ್ತರಣಾ ಕಾಮಗಾರಿಗೆ 5ಕೋಟಿ ರೂ.ಗೆ ಅನುಮೋದನೆ ದೊರೆತಿದ್ದು, ಇದರ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಅವರು ಹೇಳಿದರು.
2017-18ನೆ ಸಾಲಿನಲ್ಲಿ ಹೊಸದಾಗಿ ತಾಲೂಕಿಗೆ ಒಂದರಂತೆ ಗ್ರಾಮೀಣ ಕೃಷಿ ಯಂತ್ರೋಪಕರಣಗಳ ಸೇವಾ ಕೇಂದ್ರಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಜಿಲ್ಲೆಯ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ 6ರಿಂದ 8ನೆ ತರಗತಿಗೆ 60 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸುವ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಜಲ ಸಾಹಸ ಕ್ರೀಡೆಗಳ ಅಭಿವೃದ್ಧಿಗಾಗಿ ಮಲ್ಪೆ- ಪಡುಕೆರೆ ಸಮುದ್ರ ತೀರದಲ್ಲಿ ಸುಮಾರು ಎರಡು ಎಕ್ರೆ ಜಾಗವನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಹಸ್ತಾಂತರಿಸಲು ಕ್ರಮ ವಹಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಐದು ಸಂಘಸಂಸ್ಥೆಗಳು ಸೇರಿದಂತೆ ಒಟ್ಟು 52 ಮಂದಿಗೆ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಜಿಪಂ ಅಧ್ಯಕ್ಷ ದಿನಕರ ಬಾಬು, ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ನಗರಾ ಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನರಸಿಂಹಮೂರ್ತಿ, ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮುಖ್ಯ ಅತಿಥಿಗಳಾಗಿದ್ದರು. ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಸಂಜೀವ ಎಂ.ಪಾಟೀಲ್, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶಿವಾನಂದ ಕಾಪಶಿ ಉಪಸ್ಥಿತರಿದ್ದರು.
ಇದಕ್ಕೂ ಮುನ್ನ ಉಡುಪಿ ಬೋರ್ಡ್ ಹೈಸ್ಕೂಲ್ ಎದುರು ಕನ್ನಡ ತಾಯಿ ಭುವನೇಶ್ವರಿ ದೇವಿಗೆ ಪೂಜೆ ನೆರವೇರಿಸಿದ ಸಚಿವ ಪ್ರಮೋದ್ ಮಧ್ವರಾಜ್ ಮೆರವಣಿಗೆಗೆ ಚಾಲನೆ ನೀಡಿದರು. ರಂಗಮಂದಿರದಲ್ಲಿ ಸಚಿವರಿಂದ ಗೌರವ ರಕ್ಷೆ ಹಾಗೂ ಪಥಸಂಚನ ನಡೆಯಿತು. ಕೊನೆಯಲ್ಲಿ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು.







