ಪ.ಪೂ. ಕಾಲೇಜುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

ಉಡುಪಿ, ನ.3: ಉಡುಪಿ ಜಿಲ್ಲಾ ಪದವಿ ವೂರ್ವ ಶಿಕ್ಷಣ ಇಲಾಖೆ ಹಾಗೂ ಉಡುಪಿ ಸಂತ ಸಿಸಿಲಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಅಜ್ಜರಕಾಡು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಎರಡು ದಿನಗಳ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾ ಕೂಟಕ್ಕೆ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಇಂದು ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳು ಕ್ರೀಡಾಕೂಟಗಳಲ್ಲಿ ಭಾಗ ವಹಿಸುವ ಮೂಲಕ ತಮ್ಮ ಪ್ರತಿಭೆ ಹಾಗೂ ಕ್ರೀಡಾಸ್ಪೂರ್ತಿಯ ಗುಣವನ್ನು ಬೆಳೆಸಬೇಕು. ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯ ಅಲ್ಲ. ಭಾಗವಹಿಸಿ ಕ್ರೀಡಾ ಸ್ಪೂರ್ತಿ ತೋರಿಸುವುದು ಮುಖ್ಯ ಎಂದರು.
ಕರ್ನಾಟಕ ಪ್ರಾಂತ್ಯ ಅಪೋಸ್ತೊಲಿಕ್ ಕಾರ್ಮೆಲ್ ಸಂಸ್ಥೆಯ ಅಸಿಸ್ಟೆಂಟ್ ಪ್ರೊವಿನ್ಸಿಯಲ್ ಸುಪೀರಿಯರ್ ರೋಸ್ ಆ್ಯಗ್ನೇಸ್ ಎ.ಸಿ. ಕ್ರೀಡಾಕೂಟವನ್ನು ಉದ್ಘಾಟಿಸಿದರು. ಉಡುಪಿ ಶೋಕಮಾತ ಇಗರ್ಜಿಯ ಧರ್ಮಗುರು ವಂ. ವಲೇರಿಯನ್ ಮೆಂಡೋನ್ಸಾ ಆಶೀರ್ವಚನ ನೀಡಿದರು.
ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ ಪಥಸಂಚಲನದ ವಂದನೆ ಸ್ವೀಕರಿಸಿದರು. ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ ದ್ವಜಾರೋಹಣ ನೆರವೇರಿಸಿ ದರು. ರಾಷ್ಟ್ರಮಟ್ಟದ ಕ್ರೀಡಾಪಟು ಸ್ಯಾಂಡ್ರಾ ಡಿಸೋಜ ಕ್ರೀಡಾಜ್ಯೋತಿ ಪ್ರಜ್ವಲಿಸಿದರು. ಉಡುಪಿ ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ನಗರಸಭಾ ಸದಸ್ಯ ಯಶ್‌ಪಾಲ್ ಸುವರ್ಣ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು.
ಸಂತ ಸಿಸಿಲಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಮರಿಯಾ ಗ್ರೇಸಿ ಎ.ಸಿ., ದೈಹಿಕ ಶಿಕ್ಷಣ ಶಿಕ್ಷಕ ದಿನೇಶ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು. ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವಿಜಯಲಕ್ಷ್ಮೀ ನಾಯಕ್ ಸ್ವಾಗತಿಸಿದರು. ಉಪನ್ಯಾಸಕಿ ವಸಂತಿ ವಂದಿಸಿದರು. ಸತೀಶ್ ಚಂದ್ರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.







