ರೈತರ ಸಮಸ್ಯೆ ಬಗ್ಗೆ ಪ್ರಧಾನಿ, ಮುಖ್ಯಮಂತ್ರಿಗೆ ಪತ್ರ ಬರೆದರೂ ಪ್ರತ್ಯುತ್ತರವಿಲ್ಲ: ಎಚ್.ಡಿ.ದೇವೇಗೌಡ
ಬೆಂಗಳೂರು, ನ.4: ಮೆಕ್ಕೆಜೋಳ ಹಾನಿಯಿಂದಾಗಿ ಸಂಕಷ್ಟಕ್ಕೊಳಗಾದ ರೈತರ ಸಮಸ್ಯೆ ಮತ್ತು ಅವರಿಗೆ ಪರಿಹಾರ ಕಲ್ಪಿಸುವ ಸಂಬಂಧ ಪ್ರಧಾನಿ ಮತ್ತು ಮುಖ್ಯಮಂತ್ರಿಗೆ ಪತ್ರ ಬರೆದರೂ ಇದುವರೆಗೂ ಯಾವುದೇ ಪ್ರತ್ಯುತ್ತರ ಬಂದಿಲ್ಲ ಎಂದು ಎಚ್.ಡಿ.ದೇವೇಗೌಡ ಬೇಸರ ವ್ಯಕ್ತಪಡಿಸಿದ್ದಾರೆ.
ಶನಿವಾರ ನಗರದ ಶೇಷಾದ್ರಿಪುರಂನಲ್ಲಿ ಜೆಡಿಎಸ್ ಪ್ರಧಾನ ಕಚೇರಿಯ ಜೆಪಿ ಭವನದಲ್ಲಿ ನಡೆದ ಜೆಡಿಎಸ್ ಪಕ್ಷದ ಕೋರ್ ಕಮಿಟಿ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮೆಕ್ಕೆಜೋಳ ಬೆಳೆದ ಸಮಸ್ಯೆ ಬಗ್ಗೆ ಅಧ್ಯಯನ ನಡೆಸಿದ್ದು, ಮೆಕ್ಕೆಜೋಳಕ್ಕೆ ಈ ಬಾರಿ ಆರ್ಮಿವೂಂಡ್ ರೋಗ ಬಂದಿದ್ದು, 2.5 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ರೋಗ ಹರಡಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ಈ ಸಂಬಂಧ ಪ್ರಧಾನಿ ಮತ್ತು ಮುಖ್ಯಮಂತ್ರಿಗೆ ಪತ್ರ ಬರೆದರೂ ಇದುವರೆಗೂ ಯಾವುದೇ ಪ್ರತ್ಯುತ್ತರ ಬಂದಿಲ್ಲ ಎಂದು ವ್ಯಕ್ತಪಡಿಸಿದರು.
ಪ್ರಧಾನಿ ನರೇಂದ್ರ ಮೋದಿ ಗುಜರಾತ್, ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದಾರೆ. ಖುದ್ದು ಭೇಟಿಗೆ ಪ್ರಧಾನಿಗಳ ಬಳಿ ಅವಕಾಶ ಕೋರಲಾಗಿತ್ತು. ಆದರೆ, ಚುನಾವಣಾ ಪ್ರಚಾರದಲ್ಲಿರುವುದರಿಂದ ಭೇಟಿಗೆ ಅವಕಾಶ ಸಿಗಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಮೆಕ್ಕೆಜೋಳಕ್ಕೆ ಪರಿಹಾರ ನೀಡಿದ್ದರು. ಅದೇ ರೀತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಹಾರ ನೀಡಬೇಕು. ಮುಖ್ಯಮಂತ್ರಿಗಳ ಜತೆ ಮಾತನಾಡಿದ್ದು, ಪರಿಹಾರ ನೀಡುವಂತೆ ಮನವಿ ಮಾಡಲಾಗಿದೆ ಎಂದರು.
ರಾಜ್ಯಾದ್ಯಂತ ಬಿಜೆಪಿ ಪರಿವರ್ತನಾ ರ್ಯಾಲಿ ನಡೆಸುತ್ತಿದ್ದು, ಈ ವೇಳೆ ಕೇವಲ ಚುನಾವಣೆಗೆ ಪ್ರಚಾರ ನಡೆಸದೆ ರೈತರ ಸಂಕಷ್ಟವನ್ನು ಕೇಳಿ ಎಂದ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ನಿಟ್ಟಿನಲ್ಲಿ ಕೆಲಸ ಮಾಡಿ ಕೇಂದ್ರ ಸರಕಾರಕ್ಕೆ ವಾಸ್ತವ ತಿಳಿಸಬೇಕು. ಅಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರ್ಯಾಲಿ ನಡೆಸುವ ವೇಳೆ ರೈತರ ಸಮಸ್ಯೆಗಳನ್ನು ಆಲಿಸಬೇಕು ಎಂದು ಮನವಿ ಮಾಡಿದರು.







