ಮುರಳಿ ಶೂಟೌಟ್ ಪ್ರಕರಣ: ಆರೋಪಿಗಳಿಬ್ಬರು ಖುಲಾಸೆ
ಬೆಂಗಳೂರು, ನ.9: ಕಮರ್ಷಿಯಲ್ ಸ್ಟ್ರೀಟ್ ವ್ಯಾಪ್ತಿಯಲ್ಲಿ ನಡೆದಿದ್ದ ಮುರಳಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಬ್ಬರನ್ನು ಖುಲಾಸೆಗೊಳಿಸಿ ಹೈಕೋರ್ಟ್ ಆದೇಶಿಸಿದೆ.
ಆರೋಪಿಗಳಾದ ಅಶೋಕ್ ಫರ್ನಾಂಡಿಸ್ ಹಾಗೂ ಅತೀಕ್ ಇಬ್ರಾಹೀಂಗೆ ಜೀವಾವಧಿ ಶಿಕ್ಷೆ ವಿಧಿಸಬೇಕೆಂದು ಕೋರಿ ರಾಜ್ಯ ಸರಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಮಳೀಮಠ ಮತ್ತು ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿತು.
ಪ್ರತಿವಾದಿಗಳ ಪರ ವಾದಿಸಿದ ವಕೀಲರು, 1990ರ ಫೆ.11ರಂದು ಕಮರ್ಷಿಯಲ್ ಸ್ಟ್ರೀಟ್ ವ್ಯಾಪ್ತಿಯ ಸಫೀನಾ ಪ್ಲಾಝಾ ಬಳಿ ಮುರಳಿಯನ್ನು ಗುಂಡು ಹಾರಿಸಿ ಹತ್ಯೆ ಮಾಡಿರುವ ಬಗ್ಗೆ ಯಾವುದೇ ಸಾಕ್ಷ್ಯಾಧಾರಗಳು ಇಲ್ಲ. ಹೀಗಾಗಿ, ಈ ಇಬ್ಬರು ಆರೋಪಿಗಳನ್ನು ಪ್ರಕರಣದಿಂದ ಖುಲಾಸೆಗೊಳಿಸಬೇಕೆಂದು ಪೀಠಕ್ಕೆ ತಿಳಿಸಿದರು.
ವಕೀಲರ ವಾದ ಪ್ರತಿವಾದ ಆಲಿಸಿದ ನ್ಯಾಯಪೀಠವು ಗುಂಡಿಗೆ ಬಲಿಯಾದ ಮುರಳಿಯನ್ನು ಆರೋಪಿಗಳೆ ಹತ್ಯೆಗೈದಿದ್ದಾರೆ ಎಂಬ ಯಾವುದೇ ಸಾಕ್ಷಾಧಾರಗಳೂ ಇಲ್ಲ. ಹೀಗಾಗಿ, ಆರೋಪಿಗಳನ್ನು ಪ್ರಕರಣದಿಂದ ಖುಲಾಸೆಗೊಳಿಸಿ ಆದೇಶಿಸಿತು.





