ಜೆಡಿಎಸ್ ಶಾಸಕರನ್ನು ಗೆಲ್ಲಿಸಲು ಅಲ್ಪಸಂಖ್ಯಾತರ ಘಟಕ ಪಣ ತೊಟ್ಟಿದೆ: ಮೊಹಮ್ಮದ್ ಇಕ್ಬಾಲ್

ತುಮಕೂರು, ನ.15: ಜಿಲ್ಲಾ ಜೆಡಿಎಸ್ ನ ಅಲ್ಪಸಂಖ್ಯಾತರ ಘಟಕದ ವತಿಯಿಂದ ಮುಂಬರುವ ದಿನಗಳಲ್ಲಿ ಮನೆ ಮನೆಗೆ ಕುಮಾರಣ್ಣ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಹಾಜಿ ಮೊಹಮ್ಮದ್ ಇಕ್ಬಾಲ್ ತಿಳಿಸಿದ್ದಾರೆ.
ಪಕ್ಷದ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದ ಮುಖ್ಯಮಂತ್ರಿಯಾಗಬೇಕು ಎಂಬ ಸದುದ್ದೇಶದಿಂದ ಅಲ್ಪಸಂಖ್ಯಾತರೆಲ್ಲಾ ಒಂದಾಗಿ ಜೆಡಿಎಸ್ ಪಕ್ಷವನ್ನು ಬೆಂಬಲಿಸಲು ತೀರ್ಮಾನಿಸಿದ್ದಾರೆ. ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಕನಿಷ್ಠ 9 ರಲ್ಲಿ ಜೆಡಿಎಸ್ ಶಾಸಕರನ್ನು ಗೆಲ್ಲಿಸಲು ಅಲ್ಪಸಂಖ್ಯಾತರ ಘಟಕ ಪಣ ತೊಟ್ಟಿದೆ. ಈ ನಿಟ್ಟಿನಲ್ಲಿ ಎಲ್ಲಾ ಪದಾಧಿಕಾರಿಗಳನ್ನು ಒಗ್ಗೂಡಿಸಿ, ಪಕ್ಷದ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಲಾಗುವುದು ಎಂದರು.
ತುಮಕೂರು ನಗರದ ಮತ್ತು ಜಿಲ್ಲೆಯ ಉಳಿದ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದಿಂದ ಯಾರೇ ಅಧಿಕೃತವಾಗಿ ಟಿಕೆಟ್ ತಂದು ಸ್ಪರ್ಧಿಸಿದರೂ ಅಲ್ಪಸಂಖ್ಯಾತರ ಘಟಕ ಅವರ ಗೆಲುವಿಗೆ ಶ್ರಮಿಸುತ್ತದೆ. ಜಿಲ್ಲೆಯಾದ್ಯಂತ ಪ್ರವಾಸ ಮಾಡಿ, ಅಲ್ಪಸಂಖ್ಯಾತ ಮತದಾರರು, ಕಾರ್ಯಕರ್ತರನ್ನು ಸಂಘಟಿಸಿ ಪಕ್ಷದ ಬಲವರ್ಧನೆಗೆ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ತಿಳಿಸಿದರು.
ತುಮಕೂರು ಜಿಲ್ಲಾ ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿ ಸುಲ್ತಾನ್ ಮೊಹಮ್ಮದ್ ಮಾತನಾಡಿ, 2019ರಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಅಲ್ಪಸಂಖ್ಯಾತರಿಗೆ ಟಿಕೇಟ್ ನೀಡಬೇಕೆಂಬುದು ನಮ್ಮ ಒತ್ತಾಯ. ಈಗಾಗಲೇ ಈ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ರಾಜ್ಯಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷರೊಂದಿಗೆ ಈ ಬಗ್ಗೆ ಮಾತುಕತೆ ನಡೆಸಿದ್ದು, ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಹಿನ್ನೆಲೆಯಲ್ಲಿ 2018ರ ವಿಧಾನಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಗೆಲ್ಲಲು ಅಲ್ಪಸಂಖ್ಯಾತರು ಒಗ್ಗೂಡಿ ಕೆಲಸ ಮಾಡುವುದಾಗಿ ಹೇಳಿದರು.
ಜೆಡಿಎಸ್ ರಾಜ್ಯ ಯುವ ಘಟಕದ ಉಪಾಧ್ಯಕ್ಷ ಕೆಂಪರಾಜು ಮಾತನಾಡಿ, ಪಕ್ಷ ಯಾರಿಗೆ ಟಿಕೇಟ್ ನೀಡಿದರೂ ಅವರ ಗೆಲುವಿಗೆ ನಾವೆಲ್ಲರೂ ಶ್ರಮಿಸಬೇಕಾಗಿದೆ. ಈ ಬಾರಿಯ ಚುನಾವಣೆ ಜೆಡಿಎಸ್‍ಗೆ ಮಹತ್ವದ್ದಾಗಿದ್ದು, ಎರಡು ರಾಷ್ಟ್ರಿಯ ಪಕ್ಷಗಳಿಂದ ರಾಜ್ಯದ ಜನರಿಗೆ ಪದೇ ಪದೇ ಆಗುತ್ತಿರುವ ಅನ್ಯಾಯವನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯದ ಜನತೆ ಜೆಡಿಎಸ್ ಪಕ್ಷದತ್ತ ಮುಖ ಮಾಡಿದ್ದು, ಈ ನಿರ್ಣಾಯಕ ಹೋರಾಟದಲ್ಲಿ ಅಲ್ಪಸಂಖ್ಯಾತರ ಘಟಕ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಈ ವೇಳೆ ಪಕ್ಷದ ಮುಖಂಡ ಬಾಬು, ಮಾನವ ಹಕ್ಕುಗಳ ವಿಭಾಗದ ಆರ್.ದೇವರಾಜು, ಧರ್ಮೇಗೌಡ, ಕಾರ್ಮಿಕ ಘಟಕದ ಕೆ.ರಂಗಣ್ಣ, ಜಿಲ್ಲಾ ವಕ್ತಾರ ಮಧು, ತನ್ವರ್ ರೆಹಮಾನ್ ಖಾನ್ ಮತ್ತಿತರರು ಉಪಸ್ಥಿತರಿದ್ದರು.







