ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ ವಿಧೇಯಕಕ್ಕೆ ಗ್ರಹಣ
ಶಾಸಕಾಂಗ ಪಕ್ಷದ ಸಭೆಯಲ್ಲಿ ನಡೆಯದ ಚರ್ಚೆ
ಬೆಳಗಾವಿ, ನ.15: ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ ತಿದ್ದುಪಡಿ ವಿಧೇಯಕಕ್ಕೆ ಗ್ರಹಣ ಆವರಿಸಿಕೊಂಡಂತಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬುಧವಾರ ಸುವರ್ಣ ವಿಧಾನಸೌಧದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ವಿಧೇಯಕದ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎನ್ನಲಾಗಿದೆ.
ಶಾಸಕಾಂಗ ಪಕ್ಷದ ಆರಂಭದಲ್ಲೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ ವಿಧೇಯಕದ ಬಗ್ಗೆ ಯಾವ ಶಾಸಕರು ಚರ್ಚೆ ನಡೆಸುವುದು ಬೇಡ. ಆರೋಗ್ಯ ಸಚಿವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಈ ವಿಧೇಯಕದ ಕುರಿತು ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಶಾಸಕಾಂಗ ಸಭೆ ಪೂರ್ಣಗೊಳ್ಳುವ ಮುಂಚೆಯೇ ಹೊರ ಬಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ.ಆರ್.ರಮೇಶ್‍ಕುಮಾರ್, ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ‘ನೀವು ಏನೇ ಕೇಳುವುದಿದ್ದರೆ ನಮ್ಮ ಶಾಸಕಾಂಗ ಪಕ್ಷದ ನಾಯಕರನ್ನೇ ಕೇಳಿ, ಈ ಬಗ್ಗೆ ನಾನು ಏನನ್ನೂ ಹೇಳುವುದಿಲ್ಲ’ ಎಂದು ಹತಾಶರಾಗಿ ತೆರಳಿದರು.





