‘ತುಳುನಾಡೋಚ್ಚಯ’ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ

ಉಡುಪಿ, ನ.20: ಮಂಗಳೂರು ಪಿಲಿಕುಲ ತುಳು ಸಂಸ್ಕೃತಿ ಗ್ರಾಮದಲ್ಲಿ ಡಿ. 23 ಮತ್ತು 24ರಂದು ನಡೆಯುವ ‘ತುಳುನಾಡೋಚ್ಚಯ’ ಕಾರ್ಯಕ್ರಮದ ಪ್ರಯುಕ್ತ ತುಳುನಾಡಿನ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹಮ್ಮಿ ಕೊಳ್ಳಲಾದ ಸಹಿ ಸಂಗ್ರಹ ಅಭಿಯಾನಕ್ಕೆ ಸೋಮವಾರ ಉಡುಪಿ ಶ್ರೀಕೃಷ್ಣ ಮಠದಲ್ಲಿ ಚಾಲನೆ ನೀಡಲಾಯಿತು.
ತುಳು ಭಾಷೆಯನ್ನು ಎಂಟನೆ ಪರಿಚ್ಛೇಧಕ್ಕೆ ಸೇರ್ಪಡೆ, ತುಳುನಾಡ ಅಭಿವೃದ್ಧಿ ಪ್ರಾಧಿಕಾರದ ಸ್ಥಾಪನೆ, ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ, ಕಾಸರ ಗೋಡು ಜಿಲ್ಲೆಯನ್ನು ಕರ್ನಾಟಕ ರಾಜ್ಯಕ್ಕೆ ಸೇರಿಸಬೇಕೆಂಬ ಬೇಡಿಕೆಗಳನ್ನು ಜನ ಸಾಮಾನ್ಯರಿಗೆ ತಿಳಿಸುವ ಮತ್ತು ಕೇಂದ್ರ ಹಾಗೂ ರಾಜ್ಯ ಸರಕಾರದ ಗಮನಕ್ಕೆ ತರುವ ಉದ್ದೇಶದಿಂದ ಮುದ್ರಾಡಿಯ ನಮ ತುಳುವೆರ್ ಕಲಾ ಸಂಘಟನೆ ನೇತೃತ್ವದಲ್ಲಿ ತುಳುನಾಡ ರಕ್ಷಣಾ ವೇದಿಕೆ ಮತ್ತು ಸುಮನಸಾ ಕೊಡವೂರು ಸಹಕಾರದೊಂದಿಗೆ ಈ ಅಭಿಯಾನವನ್ನು ಆಯೋಜಿಸಲಾಗಿದೆ.
ಪರ್ಯಾಯ ಪೇಜಾವರ ಶ್ರೀವಿಶ್ವೇಶ ತೀರ್ಥ ಸ್ವಾಮೀಜಿ ತುಳುವಿನಲ್ಲಿ ಸಹಿ ಹಾಕುವ ಮಾಲಕ ಅಭಿಯಾನಕ್ಕೆ ಚಾಲನೆ ನೀಡಿ, ತುಳು ಭಾಷೆಯ ಅಭಿವೃದ್ಧಿ ಆಗಬೇಕು ಮತ್ತು ಎಂಟನೆ ಪರಿಚ್ಛೇಧಕ್ಕೆ ಸೇರ್ಪಡೆಗೊಳಿಸಬೇಕೆಂಬುದು ತುಳು ಜನರ ಒಕ್ಕೋರಲಿನ ಬೇಡಿಕೆಯಾಗಿದೆ. ಈ ಬೇಡಿಕೆಗಳು ಈ ಅಭಿಯಾನ ದಿಂದಾಗಿ ಶೀಘ್ರವೇ ಈಡೇರಲಿ ಎಂದು ಶುಭಹಾರೈಸಿದರು.
ಈ ಸಂದರ್ಭದಲ್ಲಿ ಕಾರ್ಯಕ್ರಮದ ಪ್ರಮುಖರಾದ ಡಾ.ರಾಜೇಶ್ ಆಳ್ವ, ಕಸಾಪ ದ.ಕ. ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ತುಳುಕೂಟದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ನಮ ತುಳುವೆರ್ ಕಲಾ ಸಂಘಟನೆಯ ಅಧ್ಯಕ್ಷ ಸುಕುಮಾರ್ ಮೋಹನ್, ಯೋಗಿ ಮೋಹನ್, ತುರವೇ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು, ಉಪನ್ಯಾಸಕಿ ಡಾ.ನಿಕೇತನ, ಸುಮನಸಾ ಕೊಡವೂರು ಅಧ್ಯಕ್ಷ ಪ್ರಕಾಶ್ ಕೊಡವೂರು ಮೊದಲಾದವರು ಉಪಸ್ಥಿತರಿದ್ದರು. ಈ ಅಭಿ ಯಾನವು ಉಡುಪಿ, ದ.ಕ. ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಸಂಚರಿಸಿ ಸಹಿ ಸಂಗ್ರಹ ಮಾಡಲಿದೆ.







