ಅಲೆಮಾರಿ-ಅರೆಅಲೆಮಾರಿ ಜನಾಂಗದ ಅಭಿವೃದ್ಧಿಗೆ ಸರಕಾರ ಬದ್ಧ: ಸಚಿವ ಆಂಜನೇಯ
ಬೆಳಗಾವಿ, ನ.22: ರಾಜ್ಯ ಸರಕಾರವು ಅವಕಾಶ ವಂಚಿತ ಅಲೆಮಾರಿ-ಅರೆ ಅಲೆಮಾರಿ ಜನಾಂಗದ ಸರ್ವಾಂಗೀಣ ಅಭಿವೃದ್ಧಿಗೆ ಸರಕಾರ ಬದ್ಧವಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಎಚ್.ಆಂಜನೇಯ ತಿಳಿಸಿದ್ದಾರೆ.
ಬುಧವಾರ ವಿಧಾನಪರಿಷತ್ತಿನಲ್ಲಿ ನಿಯಮ 330ರಡಿಯಲ್ಲಿ ಜೆಡಿಎಸ್ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಅವರು, ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಅಲೆಮಾರಿ ಜನಾಂಗದವರ ಸಲಹಾ ಸಮಿತಿ, ಪ್ರಗತಿ ಪರಿಶೀಲನಾ ಸಮಿತಿಗಳನ್ನು ರಚಿಸಲಾಗಿದೆ ಎಂದರು.
ಸಮಿತಿಯು ಕಾಲಕಾಲಕ್ಕೆ ಸಭೆ ನಡೆಸಿ ಈ ಜನಾಂಗದವರ ಬಗೆಗಿನ ಕಾರ್ಯಕ್ರಮಗಳ ಬಗ್ಗೆ ಪರಿಶೀಲನೆ ನಡೆಸುತ್ತಿದೆ. ಅಲೆಮಾರಿ ಹಾಗೂ ಅರೆಅಲೆಮಾರಿ ಜನಾಂಗದವರ ಅಭಿವೃದ್ಧಿಗಾಗಿ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದರು.
46 ಅಲೆಮಾರಿ, ಅರೆಅಲೆಮಾರಿ ಜನಾಂಗದವರಿಗೆ ಉದ್ಯೋಗ, ಶೈಕ್ಷಣಿಕ ಹಾಗೂ ಆರ್ಥಿಕ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುವಂತೆ ಪ್ರವರ್ಗ-1ರಡಿಯಲ್ಲಿ ಪ್ರಮಾಣ ಪತ್ರವನ್ನು ಕಂದಾಯ ಇಲಾಖೆಯಿಂದ ನೀಡಲಾಗುತ್ತಿದೆ. ಈ ಪ್ರಮಾಣ ಪತ್ರದಲ್ಲಿ ಅಲೆಮಾರಿ, ಅರೆಅಲೆಮಾರಿ ಜನಾಂಗವೆಂದು ನಮೂದಿಸುವ ಬಗ್ಗೆ ಕಂದಾಯ ಇಲಾಖೆ ಹಾಗೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯೊಂದಿಗೆ ಸಮಾಲೋಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನಿಡಿದರು.
ಇದಕ್ಕೂ ಮೊದಲು ವಿಷಯ ಪ್ರಸ್ತಾಪಿಸಿದ ಬಸವರಾಜ ಹೊರಟ್ಟಿ, ಅಲೆಮಾರಿ ಹಾಗೂ ಅರೆಅಲೆಮಾರಿ ಜನಾಂಗದವರನ್ನು ಪ್ರವರ್ಗ-1ಕ್ಕೆ ಸೇರಿಸಲಾಗಿದೆ. ಅಲ್ಲದೆ, 2007ರಲ್ಲಿ 46 ಅಲೆಮಾರಿ ಜನಾಂಗದವರಿಗೆ ಸಿಗಬೇಕಾದ ಸವಲತ್ತುಗಳನ್ನು ಕೊಡುವಂತೆ ರಾಜ್ಯ ಪತ್ರದಲ್ಲಿ ಪ್ರಕಟಿಸಿ, ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಸಮಿತಿಗಳನ್ನು ರಚಿಸಲಾಗಿದೆ ಎಂದರು.
ರಕಾರಿ ಆದೇಶವನ್ನು ಯಥಾವತ್ತಾಗಿ ಜಾರಿಗೊಳಿಸುವುದರೊಂದಿಗೆ ಈ 46 ಅಲೆಮಾರಿ, ಅರೆಅಲೆಮಾರಿ ಜನಾಂಗದವರಿಗೆ ಪ್ರವರ್ಗ-1ರ ಪ್ರಮಾಣ ಪತ್ರ ನೀಡುವಾಗ ಇವರಿಗೆ ಅಲೆಮಾರಿ, ಅರೆಅಲೆಮಾರಿ ಜನಾಂಗವನ್ನು ನಮೂದಿಸಿಕೊಡಬೇಕು ಎಂದು ಅವರು ಮನವಿ ಮಾಡಿದರು.







