ಎಚ್‌ಡಿಕೆ ಆರೋಪ ರಾಜಕೀಯ ಪ್ರೇರಿತ: ಜಾಫರ್ ಶರೀಫ್

ಬೆಂಗಳೂರು, ಡಿ.2: ರಾಜ್ಯದಲ್ಲಿ ಆಪರೇಷನ್ ಕಮಲಕ್ಕೆ ಸಿದ್ದರಾಮಯ್ಯ ಕುಮ್ಮಕ್ಕು ನೀಡಿದ್ದರು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮಾಡಿರುವ ಆರೋಪ ರಾಜಕೀಯ ಪ್ರೇರಿತವಾದದ್ದು ಎಂದು ಕೇಂದ್ರದ ಮಾಜಿ ಸಚಿವ ಸಿ.ಕೆ.ಜಾಫರ್ ಶರೀಫ್ ತಿರುಗೇಟು ನೀಡಿದರು.
ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ವಿಧಾನಸಭೆಗೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಕುಮಾರಸ್ವಾಮಿ, ಮುಖ್ಯಮಂತ್ರಿಯ ವಿರುದ್ಧ ಆಧಾರ ರಹಿತವಾದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ದೂರಿದರು.
ಒಬ್ಬರ ವಿರುದ್ಧ ಆರೋಪಗಳನ್ನು ಮಾಡುವ ಮುನ್ನ ಅವರ ಹಿನ್ನೆಲೆಯನ್ನು ಅರಿತುಕೊಂಡು ಮಾತನಾಡಬೇಕು. ರಾಜಕೀಯ ಪ್ರೇರಿತವಾಗಿ ಕುಮಾರಸ್ವಾಮಿ ಆರೋಪಗಳನ್ನು ಮಾಡುವುದು ಸರಿಯಲ್ಲ. ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರೆ ಸಿದ್ದರಾಮಯ್ಯರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡಿದ್ದರು ಎಂದು ಜಾಫರ್ ಶರೀಫ್ ಹೇಳಿದರು.
ಎಚ್‌ಡಿಕೆ ಆರೋಪ: ರಾಜ್ಯದಲ್ಲಿ ಬಿಜೆಪಿ ಆಡಳಿತಾವಧಿಯಲ್ಲಿ ಆಪರೇಷನ್ ಕಮಲ ನಡೆದಾಗ, ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಂಡು ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸಿದ್ದರು. ಸಿದ್ದರಾಮಯ್ಯ ವ್ಯವಹಾರದ ಬಗ್ಗೆ ಕಾಂಗ್ರೆಸ್ ಮುಖಂಡರೇ ಬಹಿರಂಗಪಡಿಸಲಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದರು.







