ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾತ್ರ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು, ಡಿ.2: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾತ್ರ ಈಗ ಚುನಾವಣೆ ನಡೆಯುತ್ತಿದ್ದು, ಉಪಾಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಎಐಸಿಸಿ ಉಪಾಧ್ಯಕ್ಷ ಸ್ಥಾನಕ್ಕೆ ತಮ್ಮ ಹೆಸರು ಕೇಳಿ ಬರುತ್ತಿರುವ ಕುರಿತು ಶನಿವಾರ ನಗರದ ಕ್ವೀನ್ಸ್‌ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಈ ಮೇಲಿನಂತೆ ಪ್ರತಿಕ್ರಿಯಿಸಿದರು.
ಉತ್ತರಪ್ರದೇಶದ ಮಹಾನಗರ ಪಾಲಿಕೆಯ ಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಲ್ಲಿಕಾರ್ಜುನ ಖರ್ಗೆ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಕೆಲವು ಸಲ ಸೋಲು, ಗೆಲುವು ಸಹಜ. ಯಾವುದನ್ನೂ ಹೋಲಿಕೆ ಮಾಡುವುದು ಸರಿಯಲ್ಲ ಎಂದರು.
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಂದಿರುವ ಫಲಿತಾಂಶವು ರಾಷ್ಟ್ರೀಯ ಚುನಾವಣೆಗಳ ಫಲಿತಾಂಶದ ಮೇಲೆ ಯಾವ ಪ್ರಭಾವವನ್ನು ಬೀರುವುದಿಲ್ಲ ಎಂದು ಅವರು ಹೇಳಿದರು.
ಯಾದಗಿರಿ ಶಾಸಕ ಡಾ.ಎ.ಬಿ.ಮಾಲಕರೆಡ್ಡಿ ಹಾಗೂ ಅಫ್ಝಲ್‌ಪುರ ಕ್ಷೇತ್ರದ ಶಾಸಕ ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್ ಪಕ್ಷವನ್ನು ತ್ಯಜಿಸಲು ಮುಂದಾಗುತ್ತಿರುವ ಕುರಿತು ತನಗೆ ಯಾವುದೆ ಮಾಹಿತಿ ಇಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.





