ಸುಳ್ಳು ಸುದ್ದಿ ಪ್ರಕಟಿಸಬೇಡಿ, ಇಲ್ಲಿಯವರೆಗೆ ಯಾರನ್ನು ಬಂಧಿಸಿಲ್ಲ: ಎಂ.ಎನ್.ಅನುಚೇತ್
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ

ಗೌರಿ ಲಂಕೇಶ್
ಬೆಂಗಳೂರು, ಡಿ.2: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಲ್ಲಿಯವರೆಗೂ ಯಾರನ್ನು ಬಂಧಿಸಿಲ್ಲ. ಆರೋಪಿಯನ್ನು ಬಂಧಿಸಿದ್ದಾರೆ ಎಂಬ ಸುಳ್ಳು ಸುದ್ದಿಯನ್ನು ಹರಡಬಾರದು ಎಂದು ವಿಶೇಷ ತನಿಖಾ ತಂಡ(ಎಸ್ಐಟಿ)ದ ಮುಖ್ಯ ತನಿಖಾಧಿಕಾರಿ, ಬೆಂಗಳೂರು ಪಶ್ಚಿಮ ವಲಯ ಡಿಸಿಪಿ ಎಂ.ಎನ್.ಅನುಚೇತ್ ಎಚ್ಚರಿಕೆ ನೀಡಿದ್ದಾರೆ.
ಕೆಲ ಮಾಧ್ಯಮಗಳಲ್ಲಿ ಗೌರಿ ಲಂಕೇಶ್ ಅವರ ಹತ್ಯೆಯ ಆರೋಪಿಯನ್ನು ಬಂಧಿಸಿದ್ದಾರೆ ಎಂಬ ಸುಳ್ಳು ಸುದ್ದಿ ಪ್ರಕಟವಾಗುತ್ತಿದ್ದಂತೆಯೇ ಅಧಿಕಾರಿ ಅನುಚೇತ್ ಅವರು ಗೌರಿ ಹತ್ಯೆಗೆ ಸಂಬಂಧಪಟ್ಟಂತೆ ಇಲ್ಲಿಯವರೆಗೆ ಯಾರನ್ನೂ ಬಂಧಿಸಿಲ್ಲ. ಆದರೆ, ಶಂಕಾಸ್ಪದ ಹಿನ್ನೆಲೆಯಲ್ಲಿ ಹಲವರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ.
ನಾಡ ಪಿಸ್ತೂಲು ಮಾರಾಟ ಪ್ರಕರಣದಲ್ಲಿ ಆರೋಪಿಯಾಗಿರುವ 52 ಆರೋಪಿಗಳಲ್ಲಿ ಒಬ್ಬರಾಗಿರುವ ಅಬ್ಬಾಸ್ ಅಲಿಗೂ ಗೌರಿ ಲಂಕೇಶ್ ಹತ್ಯೆಗೂ ಯಾವುದೇ ಸಂಬಂಧವಿಲ್ಲ. ಅಲ್ಲದೆ, ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
Next Story





