ಕೇಂದ್ರ ಸಚಿವ ಅನಂತಕುಮಾರ ಹೆಗಡೆ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ: ಬಂಧನ
ಮೈಸೂರು,ಡಿ.3: ಕೇಂದ್ರ ಸಚಿವ ಅನಂತಕುಮಾರ ಹೆಗಡೆ ವಿರುದ್ಧ ಪ್ರತಿಭಟನೆ ಮಾಡಲು ಮುಂದಾಗಿದ್ದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ಮೈಸೂರಿಗೆ ಆಗಮಿಸಿರುವ ಅನಂತಕುಮಾರ ಹೆಗಡೆ ರವಿವಾರ ಮೈಸೂರಿನ ಖಾಸಗಿ ಹೋಟೆಲ್‍ನಲ್ಲಿ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಮಾಧ್ಯಮಗೋಷ್ಠಿ ಕರೆದಿದ್ದರು. ಈ ವಿಷಯ ತಿಳಿದ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದ ಮೆಟ್ರೊಪಾಲ್ ವೃತ್ತದ ಬಳಿ ಪ್ರತಿಭಟನೆ ಮಾಡಲು ಮುಂದಾದರು. ಇದನ್ನು ತಿಳಿದ ದೇವರಾಜ ಠಾಣಾ ಪೊಲೀಸರು ಅನುಮತಿ ಪಡೆದು ಪ್ರತಿಭಟನೆ ಮಾಡುವಂತೆ ಸೂಚಿಸಿದ್ದಾರೆ. ಆದರೆ, ಇದಕ್ಕೆ ಬಗ್ಗದ ಪ್ರತಿಭಟನಾಕಾರರು ಪ್ರತಿಭಟನೆ ಮಾಡಲು ಮುಂದಾಗುತ್ತಿದ್ದಂತೆ ಬಂಧಿಸಿ ಠಾಣೆಗೆ ಕರೆದೊಯ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಹಗುರವಾಗಿ ಮಾತನಾಡುತ್ತಿರುವ ಅನಂತಕುಮಾರ ಹೆಗಡೆ ಕ್ಷಮೆಯಾಚಿಸಬೇಕೆಂಬುದು ಪ್ರತಿಭಟನಾಕಾರರ ಒತ್ತಾಯವಾಗಿತ್ತು.
ಪ್ರತಿಭಟನೆಯಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಅಜಯ್‍ರಾಜ್, ಸಿದ್ಧರಾಜು, ಮಹೇಶ್, ಸೋಮಶೇಖರ್, ಅರುಣ್, ಹರೀಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.





