ಶಿವಮೊಗ್ಗ ; ಕಿಡಿಗೇಡಿಗಳಿಂದ ಕಲ್ಲು ತೂರಾಟ : ಯುವಕನಿಗೆ ಗಾಯ

ಶಿವಮೊಗ್ಗ, ನ. 3: ಕಿಡಿಗೇಡಿಗಳ ಗುಂಪೊಂದು ಕಲ್ಲು ತೂರಾಟ ನಡೆಸಿದ ಕಾರಣದಿಂದ ಯುವಕನೋರ್ವ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಶಿವಮೊಗ್ಗ ನಗರದ ಬುದ್ದ ನಗರದಲ್ಲಿ ಶನಿವಾರ ರಾತ್ರಿ ನಡೆದಿದೆ.
ಮಿಳಘಟ್ಟದ ಸೋಹೈಲ್ (23) ಗಾಯಗೊಂಡ ಯುವಕ ಎಂದು ಗುರುತಿಸಲಾಗಿದೆ. ಘಟನೆಯಿಂದ ಸ್ಥಳದಲ್ಲಿ ಕೆಲ ಸಮಯ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳದಲ್ಲಿದ್ದವರನ್ನು ಚದುರಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಜಿಲ್ಲಾ ರಕ್ಷಣಾಧಿಕಾರಿ ಅಭಿನವ್ ಖರೆಯವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಸೋಹೈಲ್ ಆರೋಗ್ಯ ವಿಚಾರಿಸಿದರು. ಘಟನೆಯ ಕುರಿತಂತೆ ಹೆಚ್ಚಿನ ಮಾಹಿತಿ ಸಂಗ್ರಹಿಸಿದ್ದಾರೆ.
ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿಯಿತ್ತು ಪರಿಶೀಲನೆ ನಡೆಸಿದರು. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ 10 ಕ್ಕೂ ಅಧಿಕ ಆರೋಪಿಗಳ ವಿರುದ್ದ ಕೇಸ್ ದಾಖಲಾಗಿದ್ದು, ಕಿಡಿಗೇಡಿಗಳ ಬಂಧನಕ್ಕೆ ಪೊಲೀಸರು ಕ್ರಮಕೈಗೊಂಡಿದ್ದಾರೆ.
ಘಟನೆ ವಿವರ: ಮೀಲಾದುನ್ನೆಬಿ ಆಚರಣೆಯ ಅಂಗವಾಗಿ ನಗರದಲ್ಲಿ ನಡೆದ ಮೆರವಣಿಗೆ ಮುಗಿಸಿಕೊಂಡು ಸೋಹೈಲ್ ಮೊದಲಾದವರು ರಾತ್ರಿ ಬುದ್ದ ನಗರ ರಸ್ತೆಯಲ್ಲಿ ಮನೆಗೆ ಹಿಂದಿರುಗುವಾಗ ಕೆಲ ಕಿಡಿಗೇಡಿಗಳು ಏಕಾಏಕಿ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಸೋಹೈಲ್ ತಲೆಗೆ ಗಾಯವಾಗಿದೆ. ತಕ್ಷಣವೇ ಆತನನ್ನು ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಅಶಾಂತಿಯ ವಾತಾವರಣ ಸೃಷ್ಟಿಸುವ ಉದ್ದೇಶದಿಂದ ಕಿಡಿಗೇಡಿಗಳು ಈ ಕೃತ್ಯ ನಡೆಸಿದ್ದಾರೆ. ಸೋಹೈಲ್ ಮೇಲೆ ಕಲ್ಲು ತೂರಾಟ ನಡೆಸಿದ ಕಿಡಿಗೇಡಿಗಳನ್ನು ಬಂಧಿಸಿ ಶಿಸ್ತು ಕ್ರಮ ಜರುಗಿಸಬೇಕು. ಈ ಮೂಲಕ ಶಾಂತಿ-ಸುವ್ಯವಸ್ಥೆ ಕಾಪಾಡಬೇಕು ಎಂದು ಸೋಹೈಲ್ ಕಡೆಯವರು ಪೊಲೀಸ್ ಇಲಾಖೆಗೆ ಆಗ್ರಹಿಸಿದ್ದಾರೆ.







