ಟಿಪ್ಪು ಸುಲ್ತಾನ್, ಸಿದ್ದರಾಮಯ್ಯ ಫೋಟೊ ಅಸಭ್ಯವಾಗಿ ತಿರುಚಿದ ಪ್ರಕರಣ: ಆರೋಪಿಗೆ ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು

ಬೆಂಗಳೂರು, ಡಿ.7: ಮೈಸೂರು ಹುಲಿ ಟಿಪ್ಪು ಸುಲ್ತಾನ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಫೋಟೋವನ್ನು ಅಸಭ್ಯ ರೀತಿಗೆ ತಿರುಚಿ ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಸಮಾಜದಲ್ಲಿ ಕೋಮುಗಲಭೆ ಸೃಷ್ಟಿಸಲು ಉದ್ದೇಶಿಸಿದ್ದ ಆರೋಪ ಸಂಬಂಧ ಬಂಧನ ಭೀತಿ ಎದುರಿಸುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ನಿವಾಸಿ ಯೋಗೀಶ್ ಪ್ರಭುಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ನಿರೀಕ್ಷಣಾ ಜಾಮೀನು ಕೋರಿ ಯೋಗೀಶ್ ಪ್ರಭು ಸಲ್ಲಿಸಿದ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಬೂದಿಹಾಳ್ ಅವರಿದ್ದ ಪೀಠ, ಒಂದು ವೇಳೆ ಅರ್ಜಿದಾರರನ್ನು ಬಂಧಿಸಿದರೆ ಜಾಮೀನು ಮೇಲೆ ಬಿಡುಗಡೆ ಮಾಡಬೇಕು. ಅರ್ಜಿದಾರ 50 ಸಾವಿರ ರೂ. ವೈಯಕ್ತಿಕ ಬಾಂಡ್ ಮತ್ತು ಅಷ್ಟೇ ಮೊತ್ತದ ಒಬ್ಬರ ಭದ್ರತಾ ಖಾತರಿ ಒದಗಿಸಬೇಕು. ಅರ್ಜಿದಾರ ಪ್ರಕರಣದ ತನಿಖೆ ಮುಗಿಯುವವರೆಗೂ ಪ್ರತಿ ರವಿವಾರ ತನಿಖಾಧಿಕಾರಿಯ ಮುಂದೆ ಹಾಜರಾಗಬೇಕು ಎಂದು ಷರತ್ತುವಿಧಿಸಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದರು.
ಯು.ಟಿ.ತೌಸೀಫ್ ಎಂಬವರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಠಾಣೆಗೆ ಅರ್ಜಿದಾರರ ವಿರುದ್ಧ ದೂರು ನೀಡಿದ್ದರು. ಯೋಗೀಶ್ ಪ್ರಭು 2017ರ ಅ.26ರಂದು ಫೇಸ್‌ಬುಕ್‌ನಲ್ಲಿ ಟಿಪ್ಪು ಸುಲ್ತಾನ್ ಮತ್ತು ಸಿಎಂ ಸಿದ್ದರಾಮಯ್ಯ ಅವರ ಅಸಭ್ಯ ಚಿತ್ರಗಳನ್ನು ಪೋಸ್ಟ್ ಮಾಡಿದ್ದರು. ಅವರ ವಿರುದ್ಧ ಕಾನೂನು ಕ್ರಮಜರುಗಿಸುವಂತೆ ದೂರಿನಲ್ಲಿ ತೌಸೀಫ್ ಕೋರಿದರು.
ಅದರಂತೆ ದೂರು ಸ್ವೀಕರಿಸಿದ್ದ ಪೊಲೀಸರು ಅರ್ಜಿದಾರನ ವಿರುದ್ಧ ಭಾರತೀಯ ದಂಡ ಸಂಹಿತೆ ಕಾಯ್ದೆ 295(ಎ)ಯಡಿ ಧಾರ್ಮಿಕ ಭಾವನೆಗಳನ್ನು ಧಕ್ಕೆ ತಂದ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ -2000ರ ಸೆಕ್ಷನ್ 67ರಡಿ ಎಲೆಕ್ಟ್ರಾನಿಕ್ ಮಾಧ್ಯಮ ಮೂಲಕ ಅಶ್ಲೀಲ ಚಿತ್ರಗಳನ್ನು ಹರಡಿಸಿದ ಆರೋಪದ ಮೇಲೆ ದೂರು ದಾಖಲಿಸಿದ್ದರು. ಇದರಿಂದ ಯೋಗೀಶ್ ಪ್ರಭು ಬಂಧನದ ಭೀತಿಗೆ ಒಳಗಾಗಿ, ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.







