ಕಾರವಾರ; ಸುಳ್ಳು ಸುದ್ದಿ ಸೃಷ್ಟಿಸುವವರ ವಿರುದ್ಧ ಕಠಿಣ ಕ್ರಮ : ಎಸ್ಪಿ ವಿನಾಯಕ ಪಾಟೀಲ್

ಕಾರವಾರ, ಡಿ.15: ಶಾಂತಿ ಸುವ್ಯವಸ್ಥೆಯನ್ನು ಹಾಳು ಮಾಡಲು ಸುಳ್ಳು ಸುದ್ದಿಗಳನ್ನು ಸೃಷ್ಟಿಸುವವರ ವಿರುದ್ಧ ಪೊಲೀಸ್ ಇಲಾಖೆಯು ತೀವ್ರ ನಿಗಾ ಇರಿಸಿದ್ದು, ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ವಿ. ಪಾಟೀಲ್ ತಿಳಿಸಿದ್ದಾರೆ.
ಕುರಿತು ಪತ್ರಿಕಾ ಪ್ರಕಟನೆ ನೀಡಿರುವ ಅವರು, ಕೆಲವು ದುಷ್ಕರ್ಮಿಗಳು ಶಾಂತಿ ಸುವ್ಯವಸ್ಥೆಯನ್ನು ಹಾಳು ಮಾಡುವ ದುರುದ್ದೇಶದಿಂದ ಸುಳ್ಳು ವದಂತಿಗಳನ್ನು ಹಾಗೂ ಸುದ್ದಿಗಳನ್ನು ಸೃಷ್ಟಿಸಿ, ಪ್ರಚೋದನಾಕಾರಿಯಾದ ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡುತ್ತಿದ್ದಾರೆ ಎಂದರು.
ಗುರುವಾರ ಬೆಳಗ್ಗೆ ಹೊನ್ನಾವರ ತಾಲೂಕಿನ ಮಾಗೋಡ ಕೂಡ್ಲಗದ್ದೆ ಗ್ರಾಮದ ಬಾಲಕಿಯು ಶಾಲೆಗೆ ತೆರಳುತ್ತಿದ್ದ ವೇಳೆ ನಡೆದ ಘಟನೆಯ ಕುರಿತಂತೆ ಆಕೆಯ ಕೊಲೆಯಾಗಿರುವುದಾಗಿ ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡುವ ಮೂಲಕ ಜನರನ್ನು ಗಲಭೆಗೆ ಪ್ರಚೋದಿಸಲು ಪ್ರಯತ್ನಿಸಲಾಗಿತ್ತು. ಆದರೆ ಆಕೆ ಆರೋಗ್ಯವಾಗಿದ್ದು, ಮನೆಯಲ್ಲಿ ತನ್ನ ತಂದೆ-ತಾಯಿಗಳೊಂದಿಗೆ ಕ್ಷೇಮದಿಂದ ಇದ್ದಾಳೆ ಎಂದು ತಿಳಿಸಿದ್ದಾರೆ.
ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಾದ ವಾಟ್ಸ್‌ಆ್ಯಪ್, ಫೇಸ್‌ಬುಕ್ ಇತ್ಯಾದಿಗಳಲ್ಲಿ ಬರುವ ಸುಳ್ಳು ಸುದ್ದಿ ಹಾಗೂ ಪ್ರಚೋದನಾಕಾರಿ ಸಂದೇಶಗಳನ್ನು ನಂಬದೆ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ಸಹಕರಿಸಬೇಕು ಎಂದು ಕೋರಿದ್ದಾರೆ.
ಕಠಿಣ ಕ್ರಮ:
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಹಾಗೂ ಪ್ರಚೋದನಾಕಾರಿ ಸಂದೇಶಗಳನ್ನು ಪ್ರಸಾರ ಮಾಡುವ ಅಥವಾ ಹಂಚಿಕೊಳ್ಳುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಕೇವಲ ವದಂತಿಗಳ ಆಧಾರದ ಮೇಲೆ ಸಂದೇಶಗಳನ್ನು ಇತರರಿಗೆ ಹಂಚಿಕೊಳ್ಳುವುದು ಗಂಭೀರ ಅಪರಾಧವಾಗಿದ್ದು, ಶಿಕ್ಷಾರ್ಹವಾಗಿದೆ. ಸುಳ್ಳು ಸುದ್ದಿ ಹರಡಿ ಅದರಿಂದ ಯಾವುದೇ ಅನಾಹುತ ಸಂಭವಿಸಿದರೆ ಅದಕ್ಕೆ ಅವರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.







