ಅನಾಥಾಲಯ, ಮಕ್ಕಳ ಪಾಲನಾ ಸಂಸ್ಥೆಗಳ ನೋಂದಣಿಗೆ ಸೂಚನೆ
ಮಂಗಳೂರು, ಡಿ.15: ಪಾಲನೆ ಮತ್ತು ರಕ್ಷಣೆಯ ಅವಶ್ಯವಿರುವ ಮಕ್ಕಳಿಗೆ ಸ್ವಯಂ ಸೇವಾ ಸಂಸ್ಥೆಗಳು ನಡೆಸುತ್ತಿರುವ ಅನಾಥಾಲಯಗಳು, ಆಶ್ರಯಧಾಮಗಳು, ತೆರೆದ ತಂಗುದಾಣಗಳು ನಿರ್ಗತಿಕ ಮಕ್ಕಳ ಕುಠೀರ, ಬಾಲಕಾರ್ಮಿಕರಿಗಾಗಿ ನಡೆಸುತ್ತಿರುವ ಬ್ರಿಡ್ಜ್ ಶಾಲೆಗಳು, ವಿಶೇಷ ದತ್ತು ಕೇಂದ್ರಗಳು, ಉಜ್ವಲ ಕೇಂದ್ರ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಮಾನ್ಯತೆ ಪಡೆದ ವಸತಿಯುತ ಸಂಸ್ಥೆಗಳು, ಅರ್ಹ ಸಂಸ್ಥೆಗಳು, (ಶೈಕ್ಷಣಿಕ ಸಂಸ್ಥೆಗಳ ವಸತಿ ಶಾಲೆಗಳನ್ನು ಹೊರತುಪಡಿಸಿ) ಎಲ್ಲ ರೀತಿಯ ಮಕ್ಕಳ ಪಾಲನಾ ಹಾಗೂ ರಕ್ಷಣಾ ಸಂಸ್ಥೆಗಳನ್ನು ಬಾಲನ್ಯಾಯ ಕಾಯ್ದೆಯಡಿ ನೋಂದಣಿ ಮಾಡಿಸಲು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸೂಚನೆ ನೀಡಿದ್ದಾರೆ.
ಈವರೆಗೂ ನೋಂದಣಿ ಮಾಡಿಸಿಕೊಳ್ಳದ ಸರಕಾರೇತರ ಸ್ವಯಂ ಸೇವಾ ಸಂಸ್ಥೆಗಳು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾಧಿಕಾರಿಯ ಕಚೇರಿ, 1ನೆ ಮಹಡಿ, ದ.ಕ. ಜಿಲ್ಲೆ, ಮಂಗಳೂರು (ದೂ.ಸಂ: 0824-2440004/9482756407) ಇವರನ್ನು ಸಂಪರ್ಕಿಸಿ ನಿಗದಿತ ನಮೂನೆಯ ಅರ್ಜಿಯನ್ನು ಪಡೆದು ಡಿ.31ರೊಳಗೆ ನೋಂದಣಿ ಪ್ರಸ್ತಾವನೆ ಸಲ್ಲಿಸಲು ತಿಳಿಸಲಾಗಿದೆ. ತಪ್ಪಿದ್ದಲ್ಲಿ ಬಾಲನ್ಯಾಯ ಕಾಯ್ದೆಯಡಿ 1 ವರ್ಷದವರೆಗೆ ವಿಸ್ತರಿಸಬಹುದಾದ ಜೈಲುಶಿಕ್ಷೆ ಅಥವಾ 1ಲಕ್ಷ ರೂ.ಗೆ ಕಡಿಮೆ ಇಲ್ಲದಂತೆ ದಂಡ ಅಥವಾ ಎರಡನ್ನೂ ವಿಧಿಸಲಾಗುವುದು. ಮಕ್ಕಳ ಮೇಲೆ ದೌರ್ಜನ್ಯ ನಡೆದಲ್ಲಿ ಹಾಗೂ ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿದಲ್ಲಿ ಸಂಸ್ಥೆಯ ಮುಖ್ಯಸ್ಥರನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಎಚ್ಚರಿಸಿದ್ದಾರೆ.







