ಉಡುಪಿ: ಪಶ್ಚಿಮ ವಲಯ ಮಟ್ಟದ ಗೃಹರಕ್ಷಕ ವೃತ್ತಿಪರ ಕ್ರೀಡಾಕೂಟಕ್ಕೆ ಚಾಲನೆ

ಉಡುಪಿ, ಡಿ.16: ಉಡುಪಿ ಜಿಲ್ಲಾ ಗೃಹರಕ್ಷಕ ದಳದ ವತಿಯಿಂದ ಉಡುಪಿ ಚಂದು ಮೈದಾನದಲ್ಲಿ ಹಮ್ಮಿಕೊಳ್ಳಲಾದ ಮೂರು ದಿನಗಳ ಪಶ್ಚಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟಕ್ಕೆ ಮಣಿಪಾಲ ಕೆಎಂಸಿ ಆಸ್ಪತ್ರೆಯ ಯೂರಾಲಜಿ ವಿಭಾಗದ ಪ್ರಾಧ್ಯಾಪಕ ಡಾ.ಪದ್ಮರಾಜ ಹೆಗ್ಡೆ ಶನಿವಾರ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದರಿಂದ ಉತ್ತಮ ದೈಹಿಕ ಕ್ಷಮತೆಯನ್ನು ಪಡೆಯಬಹುದು. ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಸದೃಢಗೊಳಿಸಲು ಕ್ರೀಡೆ ಸಹಕಾರಿಯಾಗಿದೆ. ಪೊಲೀಸರು ಮತ್ತು ಗೃಹರಕ್ಷಕರು ಉತ್ತಮ ದೈಹಿಕ ಕ್ಷಮತೆಯನ್ನು ಹೊಂದುವುದು ಅಗತ್ಯವಾಗಿದೆ ಎಂದರು.
ಬ್ರಹ್ಮಾವರ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್‌ನ ಮುಖ್ಯಸ್ಥ ಪ್ರಕಾಶ್‌ಚಂದ್ರ ಶೆಟ್ಟಿ ಮಾತನಾಡಿ, ಜೀವನದಲ್ಲಿ ಬರುವ ಸಂಕಷ್ಟ, ಸವಾಲುಗಳನ್ನು ಎದುರಿಸಲು ಕ್ರೀಡೆ ಹೇಳಿಕೊಡುತ್ತದೆ. ಕ್ರೀಡೆ ಆತ್ಮವಿಶ್ವಾಸವನ್ನು ಇಮ್ಮಡಿಗೊಳಿಸುತ್ತದೆ. ಪೊಲೀಸರು ಹಾಗೂ ಗೃಹರಕ್ಷಕರು ಕೆಲಸದ ಒತ್ತಡದಿಂದಾಗಿ ತಮ್ಮ ಆರೋಗ್ಯದ ಕಡೆಗೆ ಗಮನ ಹರಿಸುತ್ತಿಲ್ಲ. ಆದುದರಿಂದ ಇಂತಹ ಕ್ರೀಡಾಕೂಟಗಳು ಉತ್ತಮ ಆರೋಗ್ಯಕ್ಕೆ ಸಹಕಾರಿಯಾಗುತ್ತದೆ ಎಂದು ಹೇಳಿದರು.
ಮೆಡಿಕಲ್ ಪ್ರಾಕ್ಟೀಷನರ್ ಫಾರಂ ಮಾಜಿ ಅಧ್ಯಕ್ಷ ಡಾ.ಬಿ.ಯೋಗೀಶ್ ಶೆಟ್ಟಿ, ಗೃಹರಕ್ಷಕದಳದ ಡೆಪ್ಯುಟಿ ಕಮಾಂಡೆಂಟ್ ರಮೇಶ್, ಸೆಕೆಂಡ್ ಇನ್ ಕಮಾಂಡ್ ಕೆ.ಸಿ.ರಾಜೇಶ್ ಉಪಸ್ಥಿತರಿದ್ದರು.ಜಿಲ್ಲಾ ಕಮಾಂಡೆಂಟ್ ಡಾ.ಕೆ. ಪ್ರಶಾಂತ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾನಾಡಿ ಸ್ವಾಗತಿಸಿದರು.
ಈ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳ ಗೃಹರಕ್ಷಕ ದಳ ಸಿಬ್ಬಂದಿಗಳು ಪಾಲ್ಗೊಂಡಿದ್ದಾರೆ.







