ಉಡುಪಿ: ಮುಖ್ಯಮಂತ್ರಿ ಭೇಟಿಗೆ ಪೂರ್ವಭಾವಿ ಸಭೆ

ಉಡುಪಿ, ಡಿ.21: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.8 ರಂದು ಉಡುಪಿ ಜಿಲ್ಲೆಗೆ ನೀಡುವ ಭೇಟಿ ಸಂಬಂಧ ಕೈಗೊಳ್ಳಬೇಕಾದ ಸಿದ್ದತೆಗಳ ಕುರಿತು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಜಿಲ್ಲೆಯ ಬೈಂದೂರು, ಬ್ರಹ್ಮಾವರ ಮತ್ತು ಕಾಪುವಿನಲ್ಲಿ ನಡೆಯುವ ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಯಾವುದೇ ಲೋಪಗಳು ಉಂಟಾಗ ದಂತೆ ಎಲ್ಲಾ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸು ವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಕಾರ್ಯಕ್ರಮದ ಯಶಸ್ಸಿಗಾಗಿ ವಿವಿಧ ಇಲಾಖೆಗಳ ಅಧಿಕಾರಿಗಳ ನೇತೃತ್ವದಲ್ಲಿ ವಿವಿಧ ಸಮಿತಿಗಳನ್ನು ರಚಿಸಿ, ಕೈಗೊಳ್ಳಬೇಕಾದ ಕಾರ್ಯಗಳ ಕುರಿತು ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಎಂ ಪಾಟೀಲ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಕಾಪಶಿ, ಉಪ ವಿಭಾಗಾಧಿಕಾರಿ ಶಿಲ್ಪಾನಾಗ್, ಅಪರ ಜಿಲ್ಲಾಧಿಕಾರಿ ಅನುರಾಧ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
ಬೈಂದೂರಿನಲ್ಲಿ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಜ.8ರಂದು ಬೈಂದೂರಿಗೆ ನೀಡುವ ಭೇಟಿಯ ವೇಳೆ ಕೈಗೊಳ್ಳಬೇಕಾದ ಸಿದ್ದತೆಗಳ ಕುರಿತು ಕ.ರಾ.ರ.ಸಾ.ನಿಗಮದ ಅಧ್ಯಕ್ಷ ಹಾಗೂ ಬೈಂದೂರು ಶಾಸಕ ಗೋಪಾಲ ಪೂಜಾರಿ ಅಧ್ಯಕ್ಷತೆಯಲ್ಲಿ ಬೈಂದೂರಿನ ಪ್ರವಾಸಿ ಮಂದಿರದಲ್ಲಿ ಗುರುವಾರ ಸಭೆ ನಡೆಯಿತು.
ಸಭೆಯಲ್ಲಿ ಮಾತನಾಡಿದ ಶಾಸಕ ಗೋಪಾಲ ಪೂಜಾರಿ, ಬೈಂದೂರಿನಲ್ಲಿ ಮುಖ್ಯಮಂತ್ರಿಗಳ ಪ್ರಥಮ ಕಾರ್ಯಕ್ರಮ ನಡೆಯಲಿದ್ದು,ವೇದಿಕೆ ನಿರ್ಮಾಣ ಸೇರಿದಂತೆ ಎಲ್ಲಾ ಅಗತ್ಯ ಕಾರ್ಯಗಳನ್ನು, ಯಾವುದೇ ಲೋಪಗಳಿಲ್ಲದಂತೆ ಕೈಗೊಳ್ಳುವಂತೆ ಹಾಗೂ ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಜವಾಬ್ದಾರಿಗಳನ್ನು ನಿರ್ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ತಾಪಂ ಸದಸ್ಯ ರಾಜು ಪೂಜಾರಿ, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ ಚಂದ್ರಶೇಖರ್, ಕುಂದಾಪುರ ತಹಶೀಲ್ದಾರ್ ಜಿ.ಎಂ.ಬೋರ್ಕರ್, ತಾಪಂ ಕಾರ್ಯ ನಿರ್ವಹಣಾಧಿಕಾರಿ ನಾಗಭೂಷಣ್ ಉಡುಪ, ಬೈಂದೂರು ತಹಶೀಲ್ದಾರ್ ಕಿರಣ್ ಬಿ ಗೌರಯ್ಯ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.







