ದಲಿತ ವಿದ್ಯಾರ್ಥಿನಿ ಅತ್ಯಾಚಾರ, ಹತ್ಯೆ ಖಂಡಿಸಿ ಜೆಡಿಎಸ್ ಪ್ರತಿಭಟನೆ

ಬೆಂಗಳೂರು, ಡಿ.23: ವಿಜಯಪುರದಲ್ಲಿ ದಲಿತ ವಿದ್ಯಾರ್ಥಿನಿ ಮೇಲೆ ಆದ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಬಿಬಿಎಂಪಿ ಜೆಡಿಎಸ್ ಸದಸ್ಯೆ ಮಂಜುಳಾ ನಾರಾಯಣ ಸ್ವಾಮಿ ನೇತೃತ್ವದಲ್ಲಿ ನಗರದ ವೌರ್ಯ ವೃತ್ತದ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ರಾಜ್ಯದಲ್ಲಿ ದಿನೇ ದಿನೇ ಮಹಿಳೆಯರಿಗೆ ರಕ್ಷಣೆ ಕಡಿಮೆಯಾಗುತ್ತಿದೆ. ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಎಸಗುವ ಅಪರಾಧಿಗಳನ್ನು ಬಂಧಿಸಿ ರಾಜ್ಯ ಸರಕಾರ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಬಿಎಂಪಿ ಮಾಜಿ ಸದಸ್ಯ ನಾರಾಯಣಸ್ವಾಮಿ ಆಗ್ರಹಿಸಿದರು.
ಆರೋಪಿಗಳು ಯಾರೇ ಆಗಿದ್ದರೂ ಇಂತಹ ದುಷ್ಕೃತ್ಯವೆಸಗುವ ಕಾಮಿಗಳನ್ನು ಗಲ್ಲಿಗೇರಿಸಬೇಕು. ಆಗ ಮಾತ್ರ ರಾಜ್ಯದಲ್ಲಿ ಮಹಿಳೆಯರು ಧೈರ್ಯವಾಗಿ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ನಾರಾಯಣಸ್ವಾಮಿ ಹೇಳಿದರು.
ಇದೇ ವೇಳೆ ಯಲಹಂಕ ಬಳಿಯ ಸಿಂಗನಾಯಕನಹಳ್ಳಿಯ ಬಳಿ ಶಿಕ್ಷಕಿಯೊಬ್ಬರ ಮೇಲೆ ರಾಮಕೃಷ್ಣ ಎಂಬ ಮೀಟರ್ ಬಡ್ಡಿ ದಂಧೆ ನಡೆಸುವವರು ತನ್ನ ಕೌರ್ಯವನ್ನು ಮೆರೆದಿದ್ದು ಸಮಾಜವೇ ತಲೆ ತಗ್ಗಿಸುವಂತಹ ಘಟನೆಯಾಗಿದೆ ಎಂದು ಅವರು ಹೇಳಿದರು.
ರಾಜ್ಯದಲ್ಲಿ ಪ್ರತಿದಿನ ಮಹಿಳೆಯರ ಮೇಲೆ ಅತ್ಯಾಚಾರ, ಕೊಲೆ, ಕಿರುಕುಳದ ಘಟನೆಗಳು ನಡೆಯುತ್ತಿವೆ. ಆದರೆ, ರಾಜ್ಯ ಸರಕಾರ ಮಾತ್ರ ಕಣ್ಣುಮುಚ್ಚಿ ಕುಳಿತಿದೆ ಎಂದು ಪ್ರತಿಭಟನಾ ನಿರತ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿ, ಸರಕಾರದ ವಿರುದ್ಧ ಘೋಷಣೆ ಕೂಗಿದರು.







