ಬಿ.ಕೆ.ದೇವರಾವ್‌ಗೆ ‘ಅಪ್ಪಣ್ಣ ಹೆಗ್ಡೆ ಕೃಷಿ ಪ್ರಶಸ್ತಿ’ ಪ್ರದಾನ

ಕುಂದಾಪುರ, ಡಿ.25: ಬಸ್ರೂರು ಅಪ್ಪಣ್ಣ ಹೆಗ್ಡೆ ಪ್ರತಿಷ್ಠಾನದ ವತಿಯಿಂದ ಬಿ.ಅಪ್ಪಣ್ಣ ಹೆಗ್ಡೆ ಅವರ 83ನೆ ಹುಟ್ಟುಹಬ್ಬದ ಪ್ರಯುಕ್ತ ಬಸ್ರೂರಿನ ಶ್ರೀ ಶಾರದಾ ಕಾಲೇಜಿನಲ್ಲಿ ರವಿವಾರ ನಡೆದ ಸಮಾರಂಭದಲ್ಲಿ ಬೆಳ್ತಂಗಡಿ ಮಿತ್ತಬೈಲಿನ ಪ್ರಗತಿ ಪರ ಕೃಷಿಕ ಬಿ.ಕೆ.ದೇವರಾವ್‌ಗೆ ‘ಅಪ್ಪಣ್ಣ ಹೆಗ್ಡೆ ಕೃಷಿ ಪ್ರಶಸ್ತಿ’ಯನ್ನು ಪ್ರದಾನ ಮಾಡಲಾಯಿತು.
ಪ್ರಶಸ್ತಿ ಸ್ವೀಕರಿಸಿದ ಬಿ.ಕೆ.ದೇವರಾವ್ ಮಾತನಾಡಿ, ಕೃಷಿಯಲ್ಲಿ ರಾಸಾಯನಿಕ ಗೊಬ್ಬರಗಳ ಬಳಕೆಯಿಂದಾಗಿ ಮುಂದಿನ ದಿನಗಳಲ್ಲಿ ಸಾಂಪ್ರದಾಯಿಕ ಭತ್ತದ ತಳಿಯನ್ನು ಕಾಣಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್‌ನ ಶ್ರೀಗುರುದೇವಾನಂದ ಸ್ವಾಮೀಜಿ ಪ್ರಶಸ್ತಿ ಪ್ರದಾನ ಮಾಡಿದರು. ಬಿ.ಅಪ್ಪಣ್ಣ ಹೆಗ್ಡೆ ಮಾತನಾಡಿದರು. ಕಂಬದಕೋಣೆಯ ಆರ್.ಕೆ.ಸಂಜೀವ ರಾವ್ ಎಜುಕೇಶನಲ್ ಮತ್ತು ಕಲ್ಚರಲ್ ಅಕಾಡೆಮಿಯ ಅಧ್ಯಕ್ಷ ಕೆ.ಎಸ್.ಪ್ರಕಾಶ ರಾವ್ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ ದತ್ತಿನಿಧಿ, ಅಶಕ್ತರು, ರೋಗಿಗಳಿಗೆ ಸಹಾಯಧನ ವಿತರಿಸಲಾಯಿತು. ಸತೀಶ್ ಕಮ್ಮಾರ್ ಗದಗ ರಚಿಸಿದ ‘ಬಿ.ಕೆ.ದೇವರಾವ್ ಕೃಷಿ ತಪಸ್ವಿ’ ಸಾಕ್ಷಚಿತ್ರವನ್ನು ಬಿಡುಗಡೆಗೊಳಿಸ ಲಾಯಿತು.
ವಕ್ವಾಡಿಯ ಗುರುಕುಲ ವಿದ್ಯಾಸಂಸ್ಥೆಯ ಜಂಟಿ ಕಾರ್ಯನಿರ್ವಾಹಕಿ ಅನು ಪಮಾ ಎಸ್.ಶೆಟ್ಟಿ ಅಭಿನಂದನಾ ಪತ್ರ ವಾಚಿಸಿದರು. ಕೆ.ರಾಧಾಕೃಷ್ಣ ಶೆಟ್ಟಿ ಸ್ವಾಗತಿಸಿದರು. ಪ್ರತಿಷ್ಠಾನದ ಸಂಚಾಲಕ ಬಿ.ರಾಮಕಿಶನ್ ಹೆಗ್ಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ದಿನಕರ ಆರ್.ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.







