ದಲಿತ ಬಾಲಕಿಯ ಅತ್ಯಾಚಾರ, ಕೊಲೆ: ಆರೋಪಿಗಳ ಬಂಧನಕ್ಕೆ ಮನವಿ
.jpg)
ಸಾಗರ, ಡಿ. 26: ವಿಜಯಪುರದಲ್ಲಿ ಬಾಲಕಿಯ ಅತ್ಯಾಚಾರ ನಡೆಸಿ ಹತ್ಯೆಗೈದ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿ ಮಂಗಳವಾರ ಕರ್ನಾಟಕ ರಾಜ್ಯ ಸೂಫೀ ಹಝ್ರತ್ ಖ್ವಾಜಾ ಗರೀಬ್ ನವಾಝ್ ಚಿಸ್ತಿ ಸೇವಾ ಸಮಿತಿ ವತಿಯಿಂದ ಉಪವಿಭಾಗಾಧಿಕಾರಿ ಕಚೇರಿ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ವಿಜಯಪುರದ ಬಡ ಕುಟುಂಬದ ಬಾಲಕಿಯನ್ನು ದುಷ್ಕರ್ಮಿಗಳು ಅತ್ಯಾಚಾರ ನಡೆಸಿ, ಹತ್ಯೆಗೈದಿರುವುದು ಖಂಡನೀಯ. ದಲಿತ ಕುಟುಂಬಕ್ಕೆ ಸೇರಿದ ಬಾಲಕಿಯ ಕುಟುಂಬ ಈ ಘಟನೆಯಿಂದ ತೀವ್ರ ಆತಂಕದಲ್ಲಿದೆ. ರಾಜ್ಯದಲ್ಲಿ ದಲಿತ ಕುಟುಂಬಗಳ ಮೇಲೆ ಆಗುತ್ತಿರುವ ದೌರ್ಜನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ರಾಜ್ಯ ಸರಕಾರ ಮೃತ ಬಾಲಕಿಯ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡುವ ಜೊತೆಗೆ ಹೆಚ್ಚಿನ ಪರಿಹಾರ ನೀಡಬೇಕು.
ಬಾಲಕಿಯ ಕುಟುಂಬದ ಒಬ್ಬರಿಗೆ ಸರಕಾರಿ ಉದ್ಯೋಗವನ್ನು ನೀಡಿ ಕುಟುಂಬವನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡಬೇಕು. ಹತ್ಯೆಗೈದ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ ಅವರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಇಲ್ಲವಾದಲ್ಲಿ ಸಮಿತಿ ವತಿಯಿಂದ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಮನವಿಯಲ್ಲಿ ಎಚ್ಚರಿಕೆ ನೀಡಲಾಗಿದೆ.
ಈ ವೇಳೆ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ಅಶ್ಫಾಕ್, ತಾಲೂಕು ಅಧ್ಯಕ್ಷ ಸೈಯದ್ ತೌಫಿಕ್, ಪ್ರಧಾನ ಕಾರ್ಯದರ್ಶಿ ವಸೀಂ, ತಬ್ರೇಜ್, ಉಪಾಧ್ಯಕ್ಷ ಪೀರ್‌ಸಾಬ್, ಇಸರಾರ್, ಕಾರ್ಯದರ್ಶಿ ಶಾಹಿದ್, ಸಾಮಾಜಿಕ ಕಾರ್ಯಕರ್ತ ನಾಗರಾಜಸ್ವಾಮಿ ಇದ್ದರು.







