ಹೊಸ ವರ್ಷಾಚರಣೆ: 20 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆ

ಬೆಂಗಳೂರು, ಡಿ.27: ಹೊಸ ವರ್ಷಾಚರಣೆ ವೇಳೆ ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಭದ್ರತೆಗಾಗಿ 20 ಸಾವಿರಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಟಿ.ಸುನೀಲ್‌ಕುಮಾರ್ ಹೇಳಿದ್ದಾರೆ.
ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನಗರ ವ್ಯಾಪ್ತಿಯಲ್ಲಿ ಈಗಾಗಲೇ ಸದ್ಯ 1,100 ಸಿಸಿ ಟಿವಿ ಕ್ಯಾಮೆರಾಗಳಿದ್ದು, ಅವುಗಳ ಜತೆಗೆ 500 ಹೆಚ್ಚುವರಿ ಕ್ಯಾಮೆರಾಗಳನ್ನು ಅಳವಡಿಸುತ್ತಿದ್ದೇವೆ. ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಚರ್ಚ್ ಸ್ಟ್ರೀಟ್‌ಗಳಲ್ಲಿ 300 ಕ್ಯಾಮೆರಾಗಳು ಇರಲಿವೆ ಎಂದು ಮಾಹಿತಿ ನೀಡಿದರು.
ಬೆಂಗಳೂರು ನಗರದಾದ್ಯಂತ ಡಿ. 31ರಂದು ಸಂಜೆಯಿಂದಲೇ 500 ಹೊಯ್ಸಳ ವಾಹನ ಹಾಗೂ 250 ದ್ವಿಚಕ್ರ ವಾಹನಗಳಲ್ಲಿ ಸಿಬ್ಬಂದಿ ಗಸ್ತು ತಿರುಗಲಿದ್ದಾರೆ. ಆಯಾ ವಿಭಾಗಗಳಲ್ಲಿ ಭದ್ರತೆಯ ಜವಾಬ್ದಾರಿಯನ್ನು ಡಿಸಿಪಿಗಳಿಗೆ ವಹಿಸಲಾಗಿದೆ.
2 ಸಾವಿರ ಸಿಬ್ಬಂದಿ: ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಚರ್ಚ್‌ಸ್ಟ್ರೀಟ್‌ಗಳಲ್ಲಿ ಭದ್ರತೆಗೆ ಹೆಚ್ಚಿನ ಒತ್ತು ನೀಡಲಾಗಿದೆ. 2,000 ಸಿಬ್ಬಂದಿ ಈ ಸ್ಥಳದಲ್ಲಿರಲಿದ್ದಾರೆ. ವಿದ್ಯುತ್ ವ್ಯತ್ಯಯ ಸಮಸ್ಯೆ ಎದುರಾಗದಂತೆ ವಿಶೇಷ ವಿದ್ಯುತ್ ದೀಪಗಳ ವ್ಯವಸ್ಥೆ ಮಾಡಲಾಗಿದೆ. ಮಹಿಳೆಯರು ಹಾಗೂ ಮಕ್ಕಳ ಸುರಕ್ಷತೆಗೆ ಕ್ರಮ ಕೈಗೊಂಡಿದ್ದು, ಅಸಭ್ಯವಾಗಿ ವರ್ತಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಸಂಚಾರ ನಿರ್ಬಂಧ: ಮದ್ಯದ ಅಮಲಿನಲ್ಲಿ ವಾಹನ ಚಲಾಯಿಸುವರು ಹಾಗೂ ವ್ಹೀಲಿಂಗ್ ಮಾಡುವವರ ಸಂಖ್ಯೆ ಅಧಿಕವಾಗಿರುವ ಹಿನ್ನೆಲೆಯಲ್ಲಿ ಮೇಲ್ಸೇತುವೆಗಳಲ್ಲಿ ಸಂಚರಿಸಿದರೆ ಅಪಘಾತಗಳು ಉಂಟಾಗುವ ಸಂಭವವಿದೆ. ಹೀಗಾಗಿ ಡಿ. 31ರಂದು ರಾತ್ರಿ 8 ಗಂಟೆಯಿಂದ ಮರುದಿನ ಬೆಳಗ್ಗೆ 6ಗಂಟೆವರೆಗೆ ಪ್ರಮುಖ ಮೇಲ್ಸೇತುವೆಗಳಲ್ಲಿ ಖಾಸಗಿ ವಾಹನಗಳ ಸಂಚಾರ ನಿರ್ಬಂಧಿಸಿದ್ದೇವೆ ಎಂದರು.
ಮಧ್ಯರಾತ್ರಿ 2 ಗಂಟೆವರೆಗೂ ವಿಸ್ತರಣೆ
‘ನಗರ ವ್ಯಾಪ್ತಿಯ ಪಬ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ವಹಿವಾಟು ಅವಧಿಯನ್ನು ಡಿ.31ರ ಮಧ್ಯರಾತ್ರಿ 2 ಗಂಟೆಯವರೆಗೆ ವಿಸ್ತರಿಸಲಾಗಿದೆ. ಮದ್ಯ ಕುಡಿದ ಅಮಲಿನಲ್ಲಿ ರಸ್ತೆಗೆ ಬಂದು ಗಲಾಟೆ ಮಾಡಿ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದರೆ ಕಠಿಣ ಕ್ರಮ’
-ಟಿ.ಸುನೀಲ್ ಕುಮಾರ್, ನಗರ ಪೊಲೀಸ್ ಆಯುಕ್ತ







