ಚಿಕ್ಕಮಗಳೂರು: ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು, ಡಿ.28: ಪ್ರಜಾಪ್ರಭುತ್ವ ಹಾಗೂ ಸಂವಿಧಾನ ವಿರೋಧಿ ಹೇಳಿಕೆ ನೀಡಿದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆಯವರನ್ನು ಕೇಂದ್ರದ ಸಚಿವ ಸಂಪುಟದಿಂದ ಕೈಬಿಡಬೇಕೆಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಡಿ.ಎಲ್ ವಿಜಯಕುಮಾರ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
ಗುರುವಾರ ನಗರದ ಅಝಾದ್ ಪಾರ್ಕ್‍ನಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಕೇಂದ್ರ ಸಚಿವ ಅನಂತ್ ಕುಮಾರ್ ತನಗಿರುವ ಜವಾಬ್ದಾರಿ ಸ್ಥಾನವನ್ನು ಮರೆತು ಸಂವಿಧಾನ ಬದಲಾಯಿಸುತ್ತೇವೆ ಎಂಬ ಉಡಾಫೆ ಮಾತುಗಳನ್ನು ಆಡುವ ಮೂಲಕ ಈ ದೇಶದ ಸಂವಿಧಾನಕ್ಕೆ ಅಪಚಾರವೆಸಗಿದ್ದಾರೆ ಎಂದರು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ. ಎಲ್.ಮೂರ್ತಿ, ವಿಧಾನ ಪರಿಷತ್ತಿನ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ , ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಕೆ. ಮಹಮ್ಮದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ ಮಂಜೇಗೌಡ ಮೊದಲಾದವರು ಮಾತನಾಡಿದರು.
ಪಕ್ಷದ ನೂರಾರು ಕಾರ್ಯಕರ್ತರು ಘೋಷಣೆಗಳನ್ನು ಕೂಗುವ ಮೂಲಕ ಪ್ರತಿಭಟನೆ ನಡೆಸಿದರು.





