ರೈಲು ಮಾರ್ಗಕ್ಕೆ ನನ್ನ ವಿರೋಧವಿದೆ : ಸಚಿವ ಸೀತಾರಾಂ ಸ್ಪಷ್ಟನೆ

ಮಡಿಕೇರಿ ಡಿ.28 :ಕೊಡಗಿನಲ್ಲಿ ರೈಲು ಯೋಜನೆಗೆ ನನ್ನ ವಿರೋಧವಿದೆ. ಪರಿಸರ ಹಾಳು ಮಾಡಲು ಬಿಡುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಆರ್.ಸೀತಾರಾಂ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೊಡಗಿಗೆ ಸಂಪರ್ಕ ಕಲ್ಪಿಸಲು ಉದ್ದೇಶಿಸಿರುವ ರೈಲು ಮಾರ್ಗದ ಯೋಜನೆಯಿಂದ ಪರಿಸರದ ಮೇಲೆ ಪರಿಣಾಮ ಬೀರುವ ಕುರಿತು ಆತಂಕವಿದೆ. ಆದ್ದರಿಂದ ರೈಲು ಮಾರ್ಗ ಕುಶಾಲನಗರ ಗಡಿ ದಾಟಲು ಬಿಡುವುದಿಲ್ಲ ಎಂದು ತಿಳಿಸಿದರು.
ಕೊಡಗು ಜಿಲ್ಲೆಯ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಸಂಬಂಧ ಈಗಾಗಲೇ ಯಾವುದೇ ಮರಗಳನ್ನು ಕಡಿಯದೆ ರಸ್ತೆ ಅಗಲೀಕರಣ ಮಾಡಬಹುದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಆರ್.ಸೀತಾರಾಂ ಸ್ಪಷ್ಟಪಡಿಸಿದರು.
ಪೊನ್ನಂಪೇಟೆ ಹಾಗೂ ಕುಶಾಲನಗರ ತಾಲ್ಲೂಕು ರಚನೆ ಸಂಬಂಧ ಪ್ರತಿಕ್ರಿಯಿಸಿದ ಸಚಿವರು ಈಗಾಗಲೇ ಮುಖ್ಯಮಂತ್ರಿಗಳು ಮುಂದಿನ ಹಂತದಲ್ಲಿ ಬೇಡಿಕೆ ಕುರಿತು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಈಗಾಗಲೇ ಬೆಳಗಾವಿ ಅಧಿವೇಶನ ನಡೆಯುವ ಸಂದರ್ಭ ಕೊಡಗಿನ ನಿಯೋಗಕ್ಕೆ ಮಾಹಿತಿ ನೀಡಲಾಗಿದೆ ಎಂದು ಸಚಿವರು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.9 ರಂದು ಕೊಡಗು ಜಿಲ್ಲೆಯಲ್ಲಿ ಸಾಧನಾ ಸಂಭ್ರಮ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಆ ನಿಟ್ಟಿನಲ್ಲಿ ಅಗತ್ಯ ತಯಾರಿ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಸಾಧನಾ ಸಂಭ್ರಮ ಕಾರ್ಯಕ್ರಮವನ್ನು ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಮೈದಾನ ಅಥವಾ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಸಾಧನಾ ಸಂಭ್ರಮ ಕಾರ್ಯಕ್ರಮದಲ್ಲಿ ಹಕ್ಕುಪತ್ರ ವಿತರಿಸುವುದು, ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮಗಳ ಸಂಬಂಧ ಮಾಹಿತಿ ನೀಡಲಾಗಿದೆ. ಮಾನ್ಯ ಮುಖ್ಯಮಂತ್ರಿ ಅವರ ಪ್ರವಾಸ ಕಾರ್ಯಕ್ರಮ ಯಶಸ್ಸಿಗೆ ಸಹಕರಿಸುವಂತೆ ಸಚಿವರು ಕೋರಿದರು.
ಸರ್ಕಾರ ಪ್ರತಿಯೊಬ್ಬರಿಗೂ ಸೌಲಭ್ಯವನ್ನು ಕಲ್ಪಿಸಬೇಕು ಎಂಬ ಉದ್ದೇಶದಿಂದ ಹಲವು ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಆ ನಿಟ್ಟಿನಲ್ಲಿ ಸರ್ಕಾರದ ಸಾಧನೆಗೆ ಸಂಬಂಧಿಸಿದಂತೆ ಮಾಹಿತಿ ನೀಡುವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಗೆ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ನೇಮಕ ಸಂಬಂಧಿಸಿದಂತೆ ಯಾವುದೇ ಗೊಂದಲವಿಲ್ಲ. ಈ ಸಂಬಂಧ ಈಗಾಗಲೇ ಚರ್ಚಿಸಲಾಗಿದ್ದು, ಅಧಿಕಾರ ವಹಿಸಿಕೊಂಡು ಕಾರ್ಯನಿರ್ವಹಿಸುವಂತೆ ತಿಳಿಸಲಾಗಿದೆ ಎಂದು ಸಚಿವರು ಹೇಳಿದರು.







