ಜ.9 ರಂದು ‘ಸಾಧನಾ ಸಂಭ್ರಮ’ : ಮಡಿಕೇರಿಗೆ ಮುಖ್ಯಮಂತ್ರಿ ಆಗಮನ

ಮಡಿಕೇರಿ ಡಿ.28 :ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.9 ರಂದು ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಸಾಧನಾ ಸಂಭ್ರಮ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಕಾರ್ಯಕ್ರಮದ ಯಶಸ್ಸಿಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಆರ್.ಸೀತಾರಾಂ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ‘ಸಾಧನಾ ಸಂಭ್ರಮ’ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಾಧನಾ ಸಂಭ್ರಮ ಸರ್ಕಾರಿ ಕಾರ್ಯಕ್ರಮವಾಗಿದ್ದು, ವಿವಿಧ ಇಲಾಖೆಗಳ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಪಟ್ಟಿ ತಯಾರಿಸಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಸಲಹೆ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕಳೆದ ನಾಲ್ಕುವರೆ ವರ್ಷದಲ್ಲಿ ಹಲವು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ 94ಸಿ ಮತ್ತು ಸಿಸಿ ಯಡಿ ಹಕ್ಕುಪತ್ರ ವಿತರಿಸುವುದು, ದಿಡ್ಡಳ್ಳಿ ಆದಿವಾಸಿಗಳಿಗೆ ಸೌಲಭ್ಯಗಳು, ನೀರಾವರಿ ಯೋಜನೆ ಹೀಗೆ ಹಲವು ಕಾರ್ಯಕ್ರಮಗಳ ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಆರ್.ಸೀತಾರಾಂ ಅವರು ನಿರ್ದೇಶನ ನೀಡಿದರು.
ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ, ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾದ ಪದ್ಮಿನಿ ಪೊನ್ನಪ್ಪ, ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್, ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್, ಉಪ ವಿಭಾಗಾಧಿಕಾರಿ ಡಾ.ನಂಜುಂಡೇಗೌಡ ನಾನಾ ಇಲಾಖೆ ಅಧಿಕಾರಿಗಳು ಹಾಜರಿದ್ದರು.





