ಶಿವಮೊಗ್ಗ: ಜನವರಿ 19ರಿಂದ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ

ಶಿವಮೊಗ್ಗ,ಜ.2: ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಜನವರಿ 19ರಿಂದ ನಗರದ ನೆಹರೂ ಕ್ರೀಡಾಂಗಣದಲ್ಲಿ ನಡೆಸಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಅವರು ಹೇಳಿದರು.
ಸೋಮವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕ್ರೀಡಾಕೂಟದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸದರಿ ಕ್ರೀಡಾಕೂಟಕ್ಕೆ ಜಿಲ್ಲೆಯ 1500ಕ್ಕೂ ಹೆಚ್ಚಿನ ನೌಕರರು ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ಅಗತ್ಯ ಸಿದ್ಧತಾ ಕ್ರಮಗಳನ್ನು ಕೈಗೊಳ್ಳುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಮೇಶ್ ಅವರಿಗೆ ಸೂಚಿಸಿದರು.
ಈ ಎಲ್ಲಾ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮೂರು ಸಮನಾಂತರ ವೇದಿಕೆಗಳಲ್ಲಿ ನಡೆಸಲು ಕ್ರಮಕೈಗೊಳ್ಳಲಾಗುವುದು. ತಾಲೂಕು ಮಟ್ಟದಲ್ಲಿ ನೌಕರರ ಸಂಘದ ವತಿಯಿಂದ ಏರ್ಪಡಿಸಲಾದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರು ಮಾತ್ರ ಪಾಲ್ಗೊಳ್ಳುತ್ತಿದ್ದು, ಇಲ್ಲಿ ನಡೆಯುವ ಸ್ಪರ್ಧೆಯಲ್ಲಿ ವಿಜೇತರಾದವರನ್ನು ಜನವರಿ ಮಾಸಾಂತ್ಯದಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದವರು ನುಡಿದರು.
ಜಿಲ್ಲಾ ಮಟ್ಟದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಸ್ಮರಣಿಕೆ ಹಾಗೂ ಪ್ರಶಸ್ತಿಪತ್ರ ನೀಡಿ ಗೌರವಿಸಲಾಗುವುದು. ಸ್ಪರ್ಧಾಳುಗಳಿಗೆ ಮಧ್ಯಾಹ್ನದ ಲಘು ಉಪಹಾರ ವ್ಯವಸ್ಥೆ ಕಲ್ಪಿಸಲಾಗುವುದು. ಈ ಕ್ರೀಡಾ ಕೂಟ ಆಯೋಜನೆಗೆ ಪೂರ್ವದಲ್ಲಿ ಜಿಲ್ಲಾಧಿಕಾರಿಗಳ ಉಪಸ್ಥಿತಿಯಲ್ಲಿ ಮತ್ತೊಮ್ಮೆ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಕರೆದು ಇನ್ನಷ್ಟು ಪರಿಣಾಮಕಾರಿಯಾಗಿ ಕ್ರೀಡಾಕೂಟ ಆಯೋಜಿಸುವ ಬಗ್ಗೆ ಚರ್ಚೆ ನಡೆಸಲಾಗುವುದು ಎಂದರು.
ಸಭೆಯಲ್ಲಿ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ಸೂಡಾ ಆಯುಕ್ತ ಮೂಕಪ್ಪ ಕರಭೀಮಣ್ಣನವರ್, ಆಹಾರ ಇಲಾಖೆಯ ಉಪನಿರ್ದೇಶಕ ಸದಾಶಿವಪ್ಪ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಮೇಶ್, ನೌಕರರ ಸಂಘದ ಕಾರ್ಯದರ್ಶಿ ಮೋಹನ್‍ಕುಮಾರ್, ಎಸ್.ಆರ್.ಚಂದ್ರಪ್ಪ, ಐ.ಪಿ.ಶಾಂತರಾಜ್, ಬಸವನಗೌಡ, ಮುಂತಾದವರು ಉಪಸ್ಥಿತರಿದ್ದರು.







