ಕಾರು-ಲಾರಿ ಢಿಕ್ಕಿ: ಇಬ್ಬರು ಮೃತ್ಯು

ಬೆಂಗಳೂರು, ಜ.3: ಶರವೇಗವಾಗಿ ಮುನ್ನುಗ್ಗಿದ ಕಾರೊಂದು ಮುಂದೆ ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಲ್ಲಿನ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಯಶವಂತಪುರದ ನಿವಾಸಿ ಪ್ರಶಾಂತ್ ಜಿ.(27) ಮತ್ತು ಕಡಬಗೆರೆಯ ಅಕ್ಷಯ್‌ಕುಮಾರ್(25) ಮೃತಪಟ್ಟರು ಎಂದು ಪೊಲೀಸರು ತಿಳಿಸಿದರು.
ಬುಧವಾರ ಬೆಳಗಿನ ಜಾವ 6ಗಂಟೆ ಸುಮಾರಿಗೆ ಕೆಲಸಕ್ಕೆ ಹೋಗುವುದಾಗಿ ಹೇಳಿ ಮನೆಯಿಂದ ಕಾರಿನಲ್ಲಿ ಹೊರಟಿದ್ದರು. ಕಾರು ಹೊಸೂರು ಕಡೆಗೆ ಬರುತ್ತಿದ್ದಂತೆ ನೈಸ್ ರಸ್ತೆಯ ವೃಷಭಾವತಿ ಬ್ರಿಡ್ಜ್ ಸಮೀಪ ಮುಂದೆ ಹೋಗುತ್ತಿದ್ದ ಲಾರಿಯನ್ನು ಮನ್ನುಗ್ಗಿ ಹೋದ ಪರಿಣಾಮ ನಿಯಂತ್ರಣ ತಪ್ಪಿ ಮತ್ತೊಂದು ಲಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಅತಿವೇಗವಾಗಿ ಕಾರು ಚಾಲನೆ ಮಾಡಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಪ್ರಶಾಂತ್ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದು, ಅಕ್ಷಯ್‌ಕುಮಾರ್ ಖಾಸಗಿ ಕಂಪೆನಿಯೊಂದರ ಉದ್ಯೋಗಿಯಾಗಿದ್ದರು ಎಂದು ತಿಳಿದುಬಂದಿದೆ.
ಪ್ರಕರಣ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ಕೆಂಗೇರಿ ಸಂಚಾರಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.





