ಮಂಗಳೂರು: ಕಮಿಷನರೇಟ್ ವ್ಯಾಪ್ತಿಯಲ್ಲಿ ನಿರ್ಬಂಧಕಾಜ್ಞೆ

ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್
ಮಂಗಳೂರು, ಜ.3: ಕಾಟಿಪಳ್ಳ ಸಮೀಪ ನಡೆದ ಯುವಕನ ಕೊಲೆಗೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ಅವರು ಕಮೀಷನರೇಟ್ ವ್ಯಾಪ್ತಿಯಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 35ರನ್ವಯ ನಿರ್ಬಂಧಕಾಜ್ಞೆ ಹೊರಡಿಸಿ ಆದೇಶಿಸಿದ್ದಾರೆ.
ಜ. 3ರಂದು ರಾತ್ರಿ 10 ಗಂಟೆಯಿಂದ ಜ. 4ರಂದು ರಾತ್ರಿ 10 ಗಂಟೆಯವರೆಗೆ ನಿರ್ಬಂಧಕಾಜ್ಞೆ ಹೊರಡಿಸಿ ಆದೇಶ ನೀಡಿದ್ದಾರೆ. ಅದರಂತೆ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮೆರವಣಿಗೆ, ಪ್ರತಿಭಟನೆ, ಜಾಥಾ, ಧರಣಿ, ಮುಷ್ಕರ, ರಾಸ್ತಾ ರೋಕೊ, ಮುತ್ತಿಗೆ ಮೊದಲಾದವುಗಳನ್ನು ನಿರ್ಬಂಧಿಸಿ ಆದೇಶಿಸಿದ್ದಾರೆ.
ಕಮಿಷನರೇಟ್ ವ್ಯಾಪ್ತಿಗೆ ಬರುವ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ಬರುವಂತಹ ಘಟನೆಗಳು ಮರುಕಳಿಸದಂತೆ ತಡೆಗಟ್ಟುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತರ ಪ್ರಕಟನೆ ತಿಳಿಸಿದೆ.
ಕೆಎಸ್ಆರ್ಪಿ ನಿಯೋಜನೆ
ಮುಂಜಾಗೃತಾ ಕ್ರಮವಾಗಿ ಪೊಲೀಸರು ಸುರತ್ಕಲ್, ಕಾಟಿಪಳ್ಳ ಪರಿಸರದಲ್ಲಿ ಕೆಎಸ್ಆರ್ಪಿ ತುಕಡಿಯನ್ನು ನಿಯೋಜಿಸಿದ್ದಾರೆ. ಸುರತ್ಕಲ್ ಮತ್ತು ಕಾಟಿಪಳ್ಳ ಸೂಕ್ಷ್ಮ ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ಬಂದೋ ಬಸ್ತ್ ಕಲ್ಪಿಸಲಾಗಿದೆ. ಅಲ್ಲದೆ, ಕೃಷ್ಣಾಪುರ ಮತ್ತು ಚೊಕ್ಕಬೆಟ್ಟು ಪ್ರದೇಶಗಳಲ್ಲೂ ಪೊಲೀಸರನ್ನು ನಿಯೋಜಿಸಲಾಗಿದೆ.







