ಟ್ರಕ್ ಗೆ ಢಿಕ್ಕಿಯಾದ ಶಾಲಾ ಬಸ್: 6 ಮಕ್ಕಳು ಸೇರಿ 7 ಮಂದಿ ಮೃತ್ಯು

ಇಂದೋರ್, ಜ.5: ಶಾಲಾ ಬಸ್ಸೊಂದು ಡಿವೈಡರ್ ಹತ್ತಿ ಟ್ರಕ್ ಗೆ ಢಿಕ್ಕಿ ಹೊಡೆದ ಪರಿಣಾಮ 6 ಮಕ್ಕಳು ಸೇರಿ 7 ಮಂದಿ ಮೃತಪಟ್ಟಿರುವ ಘಟನೆ ಇಲ್ಲಿನ ಬಿಚೋಲಿಯಲ್ಲಿ ಸಂಭವಿಸಿದೆ.
“ಆರು ಮಕ್ಕಳು ಮೃತಪಟ್ಟಿರುವ ಬಗ್ಗೆ ನಮಗೆ ಈಗಾಗಲೇ ಮಾಹಿತಿ ಲಭಿಸಿದೆ. ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ” ಎಂದು ಪೊಲೀಸ್ ಅಧಿಕಾರಿ ಮನೋಜ್ ರೈ ಮಾಹಿತಿ ನೀಡಿದ್ದಾರೆ.
ಶಾಲಾ ಬಸ್ ನಲ್ಲಿ 30 ಮಕ್ಕಳಿದ್ದರು. ಚಾಲಕನ ನಿಯಂತ್ರಣ ತಪ್ಪಿದ ಬಸ್ ಡಿವೈಡರ್ ಮೇಲೇರಿ ವಿರುದ್ಧ ದಿಕ್ಕಿನಲ್ಲಿ ಸಾಗಿ ಎದುರಿನಿಂದ ಬರುತ್ತಿದ್ದ ಟ್ರಕ್ ಗೆ ಢಿಕ್ಕಿ ಹೊಡೆಯಿತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಮಾಹಿತಿ ನೀಡಿದ್ದಾರೆ.
ಸ್ಥಳೀಯರು ಕೂಡಲೇ ಸ್ಥಳಕ್ಕೆ ಧಾವಿಸಿ ಬಸ್ ನೊಳಗೆ ಸಿಲುಕಿದ್ದ ಮಕ್ಕಳನ್ನು ರಕ್ಷಿಸಿದ್ದಾರೆ. ಅಪಘಾತದ ತೀವ್ರತೆಗೆ ಬಸ್ ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಸ್ಥಳಕ್ಕೆ ಆ್ಯಂಬುಲೆನ್ಸ್ ಗಳು ದೌಡಾಯಿಸಿದ್ದು, ಗಾಯಗೊಂಡ ಮಕ್ಕಳನ್ನು ಬಾಂಬೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
Next Story