ಶುಲ್ಕ ಹೆಚ್ಚಳ ಸಂಬಂಧ ಪರಿಶೀಲಿಸಿ ನಿರ್ಧಾರ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು,ಜ.6: ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶ ಶುಲ್ಕ ಹೆಚ್ಚಳ ಮಾಡುವಂತೆ ಕೋರಿ ಕಾಮೆಡ್-ಕೆ ಮನವಿ ಸಲ್ಲಿಸಿದ್ದು, ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಶನಿವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಡೀಮ್ಡ್ ವಿಶ್ವ ವಿದ್ಯಾಲಯಗಳು ಹಾಗೂ ಹೊರ ರಾಜ್ಯಕ್ಕೆ ಹೋಲಿಕೆ ಮಾಡಿದರೆ ರಾಜ್ಯದ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಶುಲ್ಕ ಬಹಳ ಕಡಿಮೆ ಇದೆ. ಹೀಗಾಗಿ ಖಾಸಗಿ ಕಾಲೇಜುಗಳ ನಿರ್ವಹಣೆ ಕಷ್ಟಸಾಧ್ಯವಾಗಿದ್ದು, ಶುಲ್ಕ ಹೆಚ್ಚಳ ಮಾಡಬೇಕೆಂದು ಕಾಮೆಡ್ ಕೆ ಮನವಿ ಮಾಡಿದೆ.
ಈ ಸಂಬಂಧ ಶೀಘ್ರದಲ್ಲೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಾಧಕ-ಬಾಧಕಗಳನ್ನು ಪರಿಶೀಲಿಸಿ ವಿದ್ಯಾರ್ಥಿಗಳ ಹಿತವನ್ನು ದೃಷ್ಟಿಯಲ್ಲಿಟ್ಟುಕೊಂಡು ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶ ಶುಲ್ಕ ಹೆಚ್ಚಳ ಮಾಡುವ ಸಂಬಂಧ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ರಾಜ್ಯದಲ್ಲಿ ಹೊಸ ವೈದ್ಯಕೀಯ ಕಾಲೇಜುಗಳ ಆರಂಭಕ್ಕೆ ಅನುದಾನದ ಕೊರತೆ ಇಲ್ಲ. ಈ ಬಗ್ಗೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಪ್ರವಾಸದ ವೇಳೆ ವೈದ್ಯಕೀಯ ಕಾಲೇಜುಗಳ ಆರಂಭಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದಾರೆ ಎಂದು ಅವರು ತಿಳಿಸಿದರು.







