ದುಷ್ಕರ್ಮಿಗಳಿಂದ ದಾಳಿಗೊಳಗಾಗಿದ್ದ ಬಶೀರ್ ಮೃತ್ಯು

ಮಂಗಳೂರು, ಜ.7: ನಗರದ ಕೊಟ್ಟಾರ ಚೌಕಿ ಬಳಿ ದುಷ್ಕರ್ಮಿಗಳಿಂದ ಮಾರಣಾಂತಿಕ ದಾಳಿಗೊಳಗಾಗಿದ್ದ ಆಕಾಶಭವನ ನಿವಾಸಿ ಬಶೀರ್(47) ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಜ.3ರಂದು ರಾತ್ರಿ 9:30ರ ಸುಮಾರಿಗೆ ಕೊಟ್ಟಾರ ಚೌಕಿ ಬಳಿಯಿರುವ ತನ್ನ ಫಾಸ್ಟ್‌ಫುಡ್ ಹೋಟೆಲ್‌ನಲ್ಲಿ ನಾಲ್ವರು ದುಷ್ಕರ್ಮಿಗಳಿಂದ ಮಾರಣಾಂತಿಕವಾಗಿ ತಲವಾರು ದಾಳಿಗೆ ಒಳಗಾಗಿದ್ದರು. ಇದರಿಂದ ಗಂಭೀರ ಗಾಯಗೊಂಡು ರಸ್ತೆಯಲ್ಲಿ ಬಶೀರ್ ಅವರನ್ನು ನಗರದ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರ ತಲೆ, ಎದೆಗೆ ಗಂಭೀರ ಗಾಯಗಳಾಗಿದ್ದವು. ಅವರ ಕಿಡ್ನಿ ವೈಫಲ್ಯಗೊಂಡಿತ್ತು. ಇದರಿಂದ ಸತತ ಡಯಾಲಿಸಿಸ್ ಚಿಕಿತ್ಸೆಗೆ ಒಳಗಾಗುತ್ತಿದ್ದ ಅವರ ಸ್ಥಿತಿ ಚಿಂತಾಜನಕವಾಗಿಯೇ ಮುಂದುವರಿದಿತ್ತು. ಚಿಕಿತ್ಸೆಗೆ ಸ್ಪಂದಿಸದ ಅವರು ಇಂದು ಬೆಳಗ್ಗೆ 8:10ರ ಸುಮಾರಿಗೆ ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಕಾಟಿಪಳ್ಳದಲ್ಲಿ ಜ.3ರಂದು ಮಧ್ಯಾಹ್ನ ದೀಪಕ್ ರಾವ್ ಹತ್ಯೆ ನಡೆದಂದೇ ರಾತ್ರಿ ಬಶೀರ್ ಅವರ ಮೇಲೂ ಮಾರಣಾಂತಿಕ ದಾಳಿ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.
ದೀಪಕ್ ರಾವ್ ಹತ್ಯೆಗೆ ಪ್ರತೀಕಾರವಾಗಿ ಈ ಕೃತ್ಯ ಎಸಗಲಾಗಿತ್ತು. ಅಮಾಯಕರಾಗಿದ್ದ ಬಶೀರ್ ಅವರ ಪರಿಚಯವೇ ಇಲ್ಲದ ದುಷ್ಕರ್ಮಿಗಳು ಕೇವಲ ಪ್ರತೀಕಾರದ ಕಾರಣಕ್ಕೆ ಅವರ ಮೇಲೆ ಮಾರಣಾಂತಿಕ ದಾಳಿ ನಡೆಸಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಟಿ.ಆರ್.ಸುರೇಶ್ ತಿಳಿಸಿದ್ದರು.
ಘಟನೆಯ ಹಿನ್ನೆಲೆಯಲ್ಲಿ ಮಂಗಳೂರಿನಾದ್ಯಂತ ಬಿಗು ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ.







