ಸಾಮರಸ್ಯ ಕಾಪಾಡಲು ಮುಂದಾಗಬೇಕು : ಗೃಹ ಸಚಿವ ರಾಮಲಿಂಗಾರೆಡ್ಡಿ
'ಮುಂದಿನ ವಾರ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ'

ಬೆಂಗಳೂರು, ಜ.7: ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಎಲ್ಲ ರಾಜಕೀಯ ಪಕ್ಷಗಳು ಹಾಗೂ ಸಂಘ-ಸಂಸ್ಥೆಗಳು ಸಮಾಜದಲ್ಲಿ ಸಾಮರಸ್ಯ ಕಾಪಾಡಲು ಮುಂದಾಗಬೇಕು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಇಂದಿಲ್ಲಿ ಮನವಿ ಮಾಡಿದ್ದಾರೆ.
ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಂಗಳೂರಿನ ಜನತೆ ಶಾಂತಿ ಬಯಸುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ರಾಜಕೀಯ ಪಕ್ಷಗಳ ಮುಖಂಡರು ಸಾಮರಸ್ಯ ಕಾಪಾಡಲು ಚಿಂತನೆ ನಡೆಸಬೇಕು ಎಂದು ಇದೇ ವೇಳೆ ಸಲಹೆ ನೀಡಿದರು.
ಇತ್ತೀಚೆಗೆ ದುಷ್ಕರ್ಮಿಗಳು ನಡೆಸಿದ ಹಲ್ಲೆಯಿಂದ ತೀವ್ರವಾಗಿ ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಬಶೀರ್ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಅಗತ್ಯ ಮುನ್ನಚ್ಚರಿಕೆ ವಹಿಸಲು ಪೊಲೀಸರಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.
ಮುಂದಿನ ವಾರ ಮಂಗಳೂರಿಗೆ ತಾನೇ ಖುದ್ದು ಭೇಟಿ ನೀಡಲಿದ್ದು, ಪರಿಸ್ಥಿತಿ ಅವಲೋಕಿಸುವೆ. ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲೆ ಮುಖಂಡರೊಂದಿಗೆ ಸಮಾಲೋಚನೆ ನಡೆಸಿ, ಶಾಂತಿ ಕಾಪಾಡುವ ಪ್ರಯತ್ನ ಮಾಡಲಾಗುವುದು ಎಂದು ರಾಮಲಿಂಗಾರೆಡ್ಡಿ ಹೇಳಿದರು.





