ಮಡಿಕೇರಿ: ಜ.9ರಂದು ಮುಖ್ಯಮಂತ್ರಿಯಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

ಮಡಿಕೇರಿ,ಜ.7:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.9 ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದು, ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.
ನಗರದ ಕ್ರಿಸ್ಟಲ್ ಕೋರ್ಟ್ ಸಭಾಂಗಣದಲ್ಲಿ ನಡೆಯುವ ಕೊಡಗು ಜಿಲ್ಲೆಯ ಮಡಿಕೇರಿ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನಾ ಕಾರ್ಯಕ್ರಮವು ಅಂದು ಮಧ್ಯಾಹ್ನ 12 ಗಂಟೆಗೆ ನಡೆಯಲಿದ್ದು, ಇದಕ್ಕಾಗಿ ಸಭಾಂಗಣ ವ್ಯವಸ್ಥೆ ಮತ್ತಿತರ ಸಿದ್ಧತೆಗಳು ನಡೆದಿವೆ.
ಈ ಸಂಬಂಧ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್, ಜಿ.ಪಂ.ಸಿಇಒ ಪ್ರಶಾಂತ್ ಕುಮಾರ್ ಮಿಶ್ರ, ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್ ಅವರು ಕ್ರಿಸ್ಟಲ್ ಕೋರ್ಟ್ ಸಭಾಂಗಣಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಸಭಾಂಗಣದಲ್ಲಿ ಅಚ್ಚುಕಟ್ಟು ವ್ಯವಸ್ಥೆಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಳಿಕ ನಗರದ ಹೊರ ವಲಯದ ಗಾಲ್ಫ್ ಮೈದಾನದಲ್ಲಿ ಹೆಲಿಪ್ಯಾಡ್ ನಿರ್ಮಾಣ ಮಾಡಲಾಗಿದ್ದು, ಅಲ್ಲಿನ ವ್ಯವಸ್ಥೆಯನ್ನು ಪರಿಶೀಲನೆ ಮಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.9 ರಂದು ಮಡಿಕೇರಿ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸುಮಾರು 12,155.62 ಲಕ್ಷ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವ್ಯಾಪ್ತಿಯಲ್ಲಿ ನಗರದಲ್ಲಿ ಗಾಂಧಿ ಭವನ ನಿರ್ಮಾಕ್ಕಾಗಿ 300 ಲಕ್ಷ ರೂ ಬಿಡುಗಡೆಯಾಗಿದ್ದು, ಈ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.
ಸಮಗ್ರ ಗಿರಿಜನ ಅಭಿವೃದ್ಧಿ ಇಲಾಖೆ ವ್ಯಾಪ್ತಿಯ ವಿರಾಜಪೇಟೆ ತಾಲ್ಲೂಕಿನ ಆರ್ಜಿ ಗ್ರಾಮದಲ್ಲಿ 100 ಲಕ್ಷ ರೂ ವೆಚ್ಚದ ನಿರ್ಮಾಣ ಮಾಡಲಾಗಿರುವ ವಾಲ್ಮೀಕಿ ಭವನ ಉದ್ಘಾಟನೆ, ಬಾಳುಗೋಡು ಗ್ರಾಮದಲ್ಲಿ 99 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿರುವ ಏಕಲವ್ಯ ಮಾದರಿ ವಸತಿ ಶಾಲೆ ಸಭಾಭವನ ಉದ್ಘಾಟನೆ, ನಿಟ್ಟೂರು-ಕಾರ್ಮಾಡು ಗ್ರಾಮದಲ್ಲಿ 92.90 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಿರುವ ವಿದ್ಯಾರ್ಥಿ ನಿಲಯ ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ.
ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ನಗರದಲ್ಲಿ 198 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಕಟ್ಟಡ ಉದ್ಘಾಟನೆ ನೆರವೇರಿಸಲಿದ್ದಾರೆ.
ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಮಡಿಕೇರಿ ತಾಲ್ಲೂಕಿನ ಕುಂಜಿಲ-ಕಕ್ಕಬ್ಬೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಂಜಿಲ ಗ್ರಾಮದ ಇಗ್ಗುತಪ್ಪ ದೇವಾಲಯಕ್ಕೆ ಹೋಗುವ ರಸ್ತೆಯನ್ನು 285 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದು, ಈ ಕಾಮಗಾರಿ ಉದ್ಘಾಟನೆ, ಬೇತು ಗ್ರಾಮದ ನಾಪೋಕ್ಲು-ಬೇತು ರಸ್ತೆಯಿಂದ ಬಲಮುರಿ ಲಿಂಕ್ ರಸ್ತೆಯನ್ನು 101 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದು, ಈ ಕಾಮಗಾರಿ ಉದ್ಘಾಟನೆ ಮಾಡಲಿದ್ದಾರೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಸೋಮವಾರಪೇಟೆ ತಾಲ್ಲೂಕಿನ ಆಲೂರು-ಸಿದ್ದಾಪುರ ಗ್ರಾಮದಲ್ಲಿ 296.12 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಕಾಮಗಾರಿ ಉದ್ಘಾಟನೆ, ಮಡಿಕೇರಿ ತಾಲ್ಲೂಕು ಭಾಗಮಂಡಲ ಹೋಬಳಿ ಕೋರಂಗಾಲ ಗ್ರಾಮದಲ್ಲಿ 1500 ಲಕ್ಷ ರೂ ವೆಚ್ಚದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.
ಜಲಸಂಪನ್ಮೂಲ ಇಲಾಖೆ ವ್ಯಾಪ್ತಿಯ ಹಾರಂಗಿ ಅಣೆಕಟ್ಟು ಸಮೀಪದ ಅತ್ತೂರು ಗ್ರಾಮದಲ್ಲಿ 239 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿರುವ ಕುಡಿಯುವ ನೀರಿನ ಯೋಜನಾ ಕಾಮಗಾರಿ ಉದ್ಘಾಟನೆ, ಹಾರಂಗಿ ಅಣೆಕಟ್ಟು ಸಮೀಪದ 249 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಿರುವ ಸಂಗೀತ ಕಾರಂಜಿ ಕಾಮಗಾರಿ ಉದ್ಘಾಟನೆ, ಮಡಿಕೇರಿ ತಾಲ್ಲೂಕು ಭಾಗಮಂಡಲದಲ್ಲಿ 2,962 ಲಕ್ಷ ರೂ ವೆಚ್ಚದಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.
ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಮಡಿಕೇರಿ ತಾಲ್ಲೂಕು ಇಗ್ಗುತಪ್ಪ ದೇವಾಲಯದಲ್ಲಿ 116 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಿರುವ ಅತಿಥಿ ಗೃಹ ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವ್ಯಾಪ್ತಿಯಲ್ಲಿ ಮಡಿಕೇರಿ ತಾಲ್ಲೂಕು ಅಯ್ಯಂಗೇರಿ, ಅಯ್ಯಂಗೇರಿ-ಕುಯ್ಯಮುಡಿ, ಸೋಮವಾರಪೇಟೆ ತಾಲ್ಲೂಕಿನ ಸೂರ್ಲಬ್ಬಿ ಗ್ರಾಮಗಳಲ್ಲಿ ತಲಾ 12 ಲಕ್ಷ ರೂ ವೆಚ್ಚದಲ್ಲಿ ಹೊಸ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.
ನಗರಾಭಿವೃದ್ಧಿ ಇಲಾಖೆಯ ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ನಗರೋತ್ಥಾನ 3 ನೇ ಹಂತದ ಯೋಜನೆಯಡಿ 3,500 ಲಕ್ಷ ರೂ ವೆಚ್ಚದಲ್ಲಿ ಕುಡಿಯವ ನೀರು, ರಸ್ತೆ, ಮಳೆ ನೀರು ಚರಂಡಿ ಹಾಗೂ ಇತರೆ ಕಾಮಗಾರಿಗಳಿಗೆ ಶಿಲಾನ್ಯಾಸ, ವಿರಾಜಪೇಟೆ, ಸೋಮವಾರಪೇಟೆ ಮತ್ತು ಕುಶಾಲನಗರ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ನಗರೋತ್ಥಾನ 3 ನೇ ಹಂತದ ಯೋಜನೆಯಡಿ ತಲಾ 200 ಲಕ್ಷ ರೂ ವೆಚ್ಚದಲ್ಲಿ ಕುಡಿಯವ ನೀರು, ರಸ್ತೆ, ಮಳೆ ನೀರು ಚರಂಡಿ ಹಾಗೂ ಇತರೆ ಕಾಮಗಾರಿಗಳಿಗೆ ಶಿಲಾನ್ಯಾಸ, ಕುಶಾಲನಗರ ಪ.ಪಂ.ವ್ಯಾಪ್ತಿಯಲ್ಲಿ 500 ಲಕ್ಷ ರೂ ವೆಚ್ಚದ ವಾಣಿಜ್ಯ ಸಂಕೀರ್ಣ ನಿರ್ಮಾಣ ಕಾಮಗಾರಿ ಹಾಗೂ 759 ಲಕ್ಷ ರೂ ವೆಚ್ಚದಲ್ಲಿ ಗುಂಡೂರಾವ್ ಬಡಾವಣೆ ಅಭಿವೃದ್ಧಿಗೆ ಶಿಲಾನ್ಯಾಸ ಮಾಡಲಿದ್ದಾರೆ.
ಲೋಕೋಪಯೋಗಿ ಇಲಾಖೆ ವ್ಯಾಪ್ತಿಯಲ್ಲಿ ಸೋಮವಾರಪೇಟೆ ತಾಲ್ಲೂಕಿನ ಕಲ್ಕಂದೂರು-ಶಾಂತಳ್ಳಿ ರಸ್ತೆ ನವೀಕರಣ 90 ಲಕ್ಷ ರೂ ವೆಚ್ಚದ ಕಾಮಗಾರಿ ಹಾಗೂ ನಂಜರಾಯ ಪಟ್ಟಣದಿಂದ-ದುಬಾರೆ ಪ್ರವಾಸಿ ತಾಣದ ವರೆಗೆ 132 ಲಕ್ಷ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸವನ್ನು ಮುಖ್ಯಮಂತ್ರಿಯವರು ನೆರವೇರಿಸಲಿದ್ದಾರೆ.







