ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ: ಕೇಂದ್ರ ಸಚಿವ ಚೌಧರಿ ಬೀರೇಂದ್ರ ಸಿಂಗ್

ಮಂಗಳೂರು, ಜ.8: ದೇಶದ 19 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದ್ದು, ಮುಂದಿನ ಚುನಾವಣೆಯಲ್ಲಿ ಕರ್ನಾಟದಲ್ಲಿ ಸ್ಪಷ್ಟ ಬಹುಮತದೊಂದಿಗೆ ಪಕ್ಷ ಅಧಿಕಾರಕ್ಕೇರಲಿದೆ ಎಂದು ಕೇಂದ್ರದ ಉಕ್ಕು ಖಾತೆ ಸಚಿವ ಚೌಧರಿ ಬೀರೇಂದ್ರ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸೋಮವಾರ ಏರ್ಪಡಿಸಿದ್ದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿಯ ಆಡಳಿತ ದೇಶದ ಜನತೆಯ ಮೇಲೆ ಭಾರೀ ಪರಿಣಾಮ ಬೀರಿದೆ. ಕೇಂದ್ರದ ಯೋಜನೆಗಳು ಜನತೆಯನ್ನು ತಲುಪುತ್ತಿದ್ದು, ಕರ್ನಾಟಕದಲ್ಲೂ ಮುಂದಿನ ಚುನಾವಣೆಯಲ್ಲಿ ಗೆಲುವು ನಿಶ್ಚಿತ. ಪಕ್ಷದ ಕಾರ್ಯಕರ್ತರು ಮುಂದಿನ ಚುನಾವಣೆ ಎದುರಿಸಲು ಸಿದ್ಧರಾಗಬೇಕು ಎಂದು ಚೌಧರಿ ಬೀರೇಂದ್ರ ಸಿಂಗ್ ನುಡಿದರು.
ತ್ರಿವಳಿ ತಲಾಖ್ ಕುರಿತ ಕೇಂದ್ರದ ನಿರ್ಧಾರಕ್ಕೆ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ಕೇಂದ್ರದ ಪಾರದರ್ಶಕ ಆಡಳಿತ ಮತ್ತು ಅಭಿವೃದ್ಧಿ ಕಾರ್ಯಗಳಿಗೂ ಬೆಂಬಲ ವ್ಯಕ್ತವಾಗುತ್ತಿದೆ ಎಂದ ಚೌಧರಿ ನೋಟು ಅಪಮೌಲ್ಯ ಕೂಡ ದಿಟ್ಟ ಹೆಜ್ಜೆಯಾಗಿದೆ. ಇದರಿಂದ ದೇಶದ ಚಿತ್ರಣ ಬದಲಾಗಲಿದೆ ಎಂದರು.
ಸಂಸದ ನಳಿನ್ ಕುಮಾರ್ ಕಟೀಲ್, ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜೀವ ಮಠಂದೂರು, ಮಾಜಿ ಶಾಸಕ ಕೆ.ಮೋನಪ್ಪ ಭಂಡಾರಿ, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಉಪಸ್ಥಿತರಿದ್ದರು.





