ಅಧಿವೇಶನದ ಬಳಿಕ ಕಾಂಗ್ರೆಸ್‌ಗೆ ಸೇರ್ಪಡೆ: ಝಮೀರ್ ಅಹ್ಮದ್ ಖಾನ್

ಬೆಂಗಳೂರು, ಜ.9: ಮುಂಬರುವ ವಿಧಾನಮಂಡಲದ ಅಧಿವೇಶನದ ಬಳಿಕ ಫೆ.27 ಅಥವಾ 28ರಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗುವುದಾಗಿ ಜೆಡಿಎಸ್ ಬಂಡಾಯ ಶಾಸಕ ಬಿ.ಝೆಡ್ ಝಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
ಮಂಗಳವಾರ ನಗರದ ಕಾವಲ್‌ಭೈರಸಂದ್ರದಲ್ಲಿರುವ ಜೆಡಿಎಸ್ ಬಂಡಾಯ ಶಾಸಕ ಅಖಂಡ ಶ್ರೀನಿವಾಸಮೂರ್ತಿ ನಿವಾಸದಲ್ಲಿ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಜತೆ ನಡೆದ ಚರ್ಚೆ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ನಾವು ಏಳು ಮಂದಿ ಬಂಡಾಯ ಶಾಸಕರು ಒಟ್ಟಾಗಿದ್ದೇವೆ. ಈಗಾಗಲೆ ಕಾಂಗ್ರೆಸ್ ಪರವಾಗಿ ನಾವು ಕೆಲಸ ಮಾಡುತ್ತಿದ್ದು, ನಮಗೆಲ್ಲರಿಗೂ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಕೊಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಭರವಸೆ ನೀಡಿದ್ದಾರೆ ಎಂದು ಝಮೀರ್‌ಅಹ್ಮದ್‌ಖಾನ್ ಹೇಳಿದರು.
ಅಖಂಡ ಶ್ರೀನಿವಾಸಮೂರ್ತಿ ನಮ್ಮ ಸ್ನೇಹಿತರು. ರಾಜ್ಯಸಭೆ ಚುನಾವಣೆ ಸಂದರ್ಭದಲ್ಲಿ ನಮಗೆ ಸಹಕಾರ ನೀಡಿದ್ದರು. ಇದೀಗ ವಿಧಾನಸಭೆಗೆ ಚುನಾವಣೆ ಸಮೀಪಿಸುತ್ತಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಭೇಟಿಯಾಗಿದ್ದೇನೆ. ಟಿಕೆಟ್ ವಿಚಾರದಲ್ಲಿ ಯಾರಿಗೂ ಗೊಂದಲಗಳಿಲ್ಲ. ಇಲ್ಲಿ ಹೈಕಮಾಂಡ್ ಕೈಗೊಳ್ಳುವ ತೀರ್ಮಾನವೇ ಅಂತಿಮ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದರು.
ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮಾತನಾಡಿ, ಝಮೀರ್ ಅಹ್ಮದ್ ಖಾನ್ ನೇತೃತ್ವದಲ್ಲಿ ನಾವೆಲ್ಲ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇವೆ. ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡುವ ವಿಚಾರ ಹೈಕಮಾಂಡ್‌ಗೆ ಬಿಟ್ಟದ್ದು ಎಂದರು.
ನಮ್ಮ ಕ್ಷೇತ್ರದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಪಾಲ್ಗೊಂಡಿದ್ದರು. ಆದರೆ, ಡಿ.ಕೆ.ಶಿವಕುಮಾರ್ ಪಾಲ್ಗೊಳ್ಳಲು ಸಾಧ್ಯವಾಗಿರಲಿಲ್ಲ. ಈಗ ಬಿಡುವು ಮಾಡಿಕೊಂಡು ನಮ್ಮ ಮನೆಗೆ ಬಂದಿದ್ದಾರೆ ಎಂದು ಅವರು ಹೇಳಿದರು.







