25 ಟೆಂಡರ್‌ಶ್ಯೂರ್ ರಸ್ತೆಗಳ ನಿರ್ಮಾಣ: ಕೆ.ಜೆ.ಜಾರ್ಜ್

ಬೆಂಗಳೂರು, ಜ.10: ಸ್ಮಾರ್ಟ್‌ಸಿಟಿ ಯೋಜನೆಯಡಿ 50 ಕಿ.ಮೀ. ಉದ್ದದ 25 ರಸ್ತೆಗಳನ್ನು ಟೆಂಡರ್‌ಶ್ಯೂರ್ ಮಾದರಿಯಡಿ ಅಭಿವೃದ್ಧಿಪಡಿಸಲಾಗುವುದು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಹೇಳಿದರು.
ಬುಧವಾರ ಬಿಎಂಆರ್‌ಡಿಎನಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಬಿಬಿಎಂಪಿ ಅಧಿಕಾರಿಗಳು ಹಾಗೂ ಸರಕಾರೇತರ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಯೋಜನೆಗಳ ಅನುಷ್ಠಾನದ ಕುರಿತು ಮಾಹಿತಿ ಪಡೆದರು.
ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ ಶಿವಾಜಿನಗರ ಬಸ್ ನಿಲ್ದಾಣ, ಕೆ.ಆರ್.ಮಾರುಕಟ್ಟೆ, ಸ್ವಾತಂತ್ರ ಪಾಳ್ಯ ಕೊಳೆಗೇರಿ ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಆ ಹಿನ್ನೆಲೆಯಲ್ಲಿ ಯೋಜನೆಗಳ ಪ್ರಾತ್ಯಕ್ಷಿತೆ ರೂಪಿಸಿರುವ ಜನಾಗ್ರಹ ಸಂಸ್ಥೆಯ ಪ್ರತಿನಿಧಿ ಸ್ವಾತಿ ರಾಮನಾಥನ್ ಯೋಜನೆಗಳ ಕುರಿತು ಮಾಹಿತಿ ನೀಡಿದರು.
ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್, ಸ್ಮಾರ್ಟ್‌ಸಿಟಿ ಯೋಜನೆಗೆ ಈಗಾಗಲೇ ರಚಿಸಲಾಗಿರುವ ವಿಶೇಷ ಉದ್ದೇಶಿತ ವಾಹಕ (ಎಸ್‌ಪಿವಿ) ಜನವರಿ 16ರಂದು ಮೊದಲ ಸಭೆ ನಡೆಸಲಿದ್ದು, ಸಭೆಯಲ್ಲಿ ಯೋಜನೆಗಳ ಕುರಿತು ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು.





