ಜ.11ರಿಂದ ಮಂಗಳೂರು ವಿವಿ ಮಟ್ಟದ ಕ್ರೀಡಾಕೂಟ
ಮಂಗಳೂರು, ಜ.10: ನಗರದ ರಥಬೀದಿಯ ಡಾ. ಪಿ. ದಯಾನಂದ ಪೈ-ಪಿ. ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಮಂಗಳೂರು ವಿವಿಯ ಆಶ್ರಯದಲ್ಲಿ ಪುರುಷರು ಮತ್ತು ಮಹಿಳೆಯರಿಗಾಗಿ 37ನೆ ಮಂಗಳೂರು ವಿವಿ ಅಂತರ್ ಕಾಲೇಜು ಆ್ಯಥ್ಲೆಟಿಕ್ ಮೀಟ್ ಹಾಗೂ ಭಿನ್ನ ಸಾಮರ್ಥ್ಯದ ಮಕ್ಕಳ ಸ್ಪೋರ್ಟ್ಸ್ ಮೀಟ್ ಜ.11,12ರಂದು ನಗರದ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ. ರಾಜಶೇಖರ ಹೆಬ್ಬಾರ್ ಹೇಳಿದರು.
ಬುಧವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಜ.11ರಂದು ಬೆಳಗ್ಗೆ 10 ಗಂಟೆಗೆ ಕ್ರೀಡಾಕೂಟ ಉದ್ಘಾಟನೆಗೊಳ್ಳಲಿದ್ದು, 12ರಂದು ಸಂಜೆ 4 ಗಂಟೆಗೆ ಸಮಾರೋಪಗೊಳ್ಳಲಿದೆ.ಒಟ್ಟು 1000 ಮಂದಿ ಪದವಿ ಮಟ್ಟದ ಕ್ರೀಡಾಪಟುಗಳು, 250 ಮಂದಿ ಭಿನ್ನ ಸಾಮರ್ಥ್ಯದ ವಿದ್ಯಾರ್ಥಿಗಳು, 150 ತೀರ್ಪುಗಾರರು ಹಾಗೂ 100 ಸ್ವಯಂ ಸೇವಕರು ಭಾಗವಹಿಸಲಿದ್ದಾರೆ. ಇತ್ತೀಚೆಗೆ ಜರಗಿದ ಒಲಿಂಪಿಕ್ಸ್ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಿದ, ಪ್ರಶಸ್ತಿ ಪಡೆದ ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಪ್ರಥಮ, ದ್ವಿತೀಯ, ತೃತೀಯ ಬಹುಮಾನಗಳೊಂದಿಗೆ ನಾಲ್ಕು, ಐದು ಮತ್ತು ಆರನೇ ಸ್ಥಾನ ಪಡೆದವರಿಗೆ ಪ್ರಮಾಣಪತ್ರ ಮತ್ತು ಬಹುಮಾನ ನೀಡಲಾಗುವುದು. ಭಿನ್ನ ಸಾಮರ್ಥ್ಯದ ಮಕ್ಕಳಿಗೆ ಪಥಸಂಚಲ ಸೇರಿದಂತೆ ವಿವಿಧ ವಿಭಾಗಗಳಲ್ಲಿ ವಿಶೇಷ ಪ್ರೋತ್ಸಾಹಕ ಬಹುಮಾನ ನೀಡಲಾಗುವುದು ಎಂದವರು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಕ್ರೀಡಾ ಸಂಘಟನಾ ಕಾರ್ಯದರ್ಶಿ ಮುಹಮ್ಮದ್ ರಫೀಕ್ ಕೆ., ಕಾವೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಹಿರಿಯ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಜಾನ್ ಪಿಂಟೊ, ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಜೆ. ಪಾಂಡುರಂಗ ನಾಯಕ್, ರಮೇಶ್ ಉಪಸ್ಥಿತರಿದ್ದರು.







