ಸಿ.ಎಂ.ಇಬ್ರಾಹೀಂ-ದೇವೇಗೌಡ ಸಮಾಲೋಚನೆ: ರಾಜಕೀಯ ವಲಯದಲ್ಲಿ ಅಚ್ಚರಿ

ಬೆಂಗಳೂರು, ಜ. 15: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹೀಂ ಅವರು, ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿ ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದ್ದಾರೆ.
ಸೋಮವಾರ ಇಲ್ಲಿನ ಪದ್ಮನಾಭ ನಗರದಲ್ಲಿರುವ ದೇವೇಗೌಡ ಅವರ ನಿವಾಸಕ್ಕೆ ತೆರಳಿದ ಸಿ.ಎಂ.ಇಬ್ರಾಹೀಂ, ಸಂಕ್ರಾಂತಿ ಹಬ್ಬದ ಶುಭ ಕೋರಿದರು. ತಮ್ಮ ನಿವಾಸಕ್ಕೆ ಆಗಮಿಸಿದ ಇಬ್ರಾಹೀಂ ಅವರನ್ನು ದೇವೇಗೌಡ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆತ್ಮೀಯವಾಗಿ ಬರ ಮಾಡಿಕೊಂಡರು.
ಅಲ್ಲದೆ, ಇಬ್ರಾಹೀಂ ಅವರೊಂದಿಗೆ ದೇವೇಗೌಡ ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಸಮಾಲೋಚನೆ ನಡೆಸಿದ್ದು, ಮುಂಬರುವ ವಿಧಾನಸಭೆ ಚುನಾವಣೆ ಹಾಗೂ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಪಕ್ಷದಲ್ಲಿ ಸೂಕ್ತ ಪ್ರಾತಿನಿಧ್ಯ ದೊರೆಯುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲವೆಂದು ಇಬ್ರಾಹೀಂ ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗಿದೆ. ಹೀಗಾಗಿ ಜೆಡಿಎಸ್ ವರಿಷ್ಠ ದೇವೇಗೌಡ ಅವರನ್ನು ಭೇಟಿ ಮಾಡಿದ್ದಾರೆಂದು ತಿಳಿದು ಬಂದಿದೆ.







