ಆರ್.ಅಶೋಕ್ ವಿರುದ್ಧದ ಜಮೀನು ಅಕ್ರಮ ಮಂಜೂರಾತಿ ಆರೋಪ: ವಿಚಾರಣೆಯಿಂದ ಹಿಂದೆ ಸರಿದ ನ್ಯಾ.ಕೆ.ಎನ್.ಫಣೀಂದ್ರ

ಬೆಂಗಳೂರು, ಜ.18: ಬಗರ್ ಹುಕುಂ ಜಮೀನು ಅಕ್ರಮ ಮಂಜೂರಾತಿ ಆರೋಪದ ಸಂಬಂಧ ತಮ್ಮ ವಿರುದ್ಧ ಭಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಖಲಿಸಿರುವ ಎಫ್‌ಐಆರ್ ರದ್ದು ಕೋರಿ ಬಿಜೆಪಿ ಮುಖಂಡ ಆರ್.ಅಶೋಕ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯಿಂದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಹಿಂದೆ ಸರಿದಿದ್ದಾರೆ.
ಕಾನೂನು ಇಲಾಖೆ ಕಾರ್ಯದರ್ಶಿಯಾಗಿದ್ದ ವೇಳೆ ತಾವು ಇದೇ ರೀತಿಯ ಪ್ರಕರಣವೊಂದರ ಸಂಬಂಧ ಬಿಜೆಪಿ ಸರಕಾರಕ್ಕೆ ಕಾನೂನು ಅಭಿಪ್ರಾಯವನ್ನು ನೀಡಿದ್ದೆವು. ಹೀಗಾಗಿ, ಈ ಅರ್ಜಿಯ ವಿಚಾರಣೆ ನಾನು ನಡೆಸುವುದು ಸೂಕ್ತವಲ್ಲ. ಅರ್ಜಿ ವಿಚಾರಣೆಯಿಂದ ಹಿಂದೆ ಸರಿಯುವುದಾಗಿ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ತಿಳಿಸಿದರು. ನಂತರ ಅರ್ಜಿಯನ್ನು ಮತ್ತೊಂದು ಪೀಠದ ಮುಂದೆ ವಿಚಾರಣೆಗೆ ನಿಗದಿಪಡಿಸುವಂತೆ ರಿಜಿಸ್ಟ್ರಾರ್‌ಗೆ ಸೂಚಿಸಿದರು.
ಪ್ರಕರಣವೇನು: ಆರ್.ಅಶೋಕ್ 1998 ರಿಂದ 2006ರ ಅವಧಿಯವರೆಗೆ ಬೆಂಗಳೂರು ದಕ್ಷಿಣ ತಾಲೂಕು ಬಗರ್ ಹುಕುಂ ಭೂ-ಸಕ್ರಮೀಕರಣ ಸಮಿತಿಯ ಅಧ್ಯಕ್ಷರಾಗಿದ್ದಾಗ ಕಾನೂನು ಬಾಹಿರವಾಗಿ ಅನರ್ಹ ಫಲಾನುಭವಿಗಳಿಗೆ ಭೂ-ಮಂಜೂರಾತಿ ಮಾಡಿದ್ದಾರೆ ಎಂದು ಆರೋಪಿಸಿ ಎ ಆನಂದ ಎಂಬವರು ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದರು. ಈ ದೂರು ಆಧರಿಸಿ ಎಸಿಬಿ ಪೊಲೀಸರು ಅಶೋಕ್ ವಿರುದ್ಧ ಎಫ್ಐಆರ್ ದಾಖಲಿಸಿದ್ದರು.
ಈ ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿರುವ ಅಶೋಕ್, ನಾನು ಯಾವುದೇ ಅಕ್ರಮ ನಡೆಸಿಲ್ಲ. ಕೇವಲ ರಾಜಕೀಯ ದುರುದ್ದೇಶದಿಂದ ತನ್ನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಹೀಗಾಗಿ, ತನ್ನ ವಿರುದ್ಧ ಎಸಿಬಿ ದಾಖಲಿಸಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿದ್ದಾರೆ. ಜತೆಗೆ ಅರ್ಜಿ ಇತ್ಯರ್ಥವಾಗುವವರೆಗೆ ಎಫ್ಐಆರ್ ಆಧರಿಸಿ ತನ್ನ ವಿರುದ್ಧ ಯಾವುದೇ ಕ್ರಮಕ್ಕೆ ಮುಂದಾಗದಂತೆ ಎಸಿಬಿಗೆ ನಿರ್ದೇಶಿಸುವಂತೆ ಮಧ್ಯಂತರ ಮನವಿ ಮಾಡಿದ್ದಾರೆ.







