ಜ.20ರಂದು ರಾಜಾಜಿನಗರ ಕ್ಷೇತ್ರದ 5ನೆ ಕನ್ನಡ ಸಾಹಿತ್ಯ ಸಮ್ಮೇಳನ: ಸುರೇಶ್‌ಕುಮಾರ್
ಬೆಂಗಳೂರು, ಜ.18: ರಾಜಾಜಿನಗರ ವಿಧಾನಸಭಾ ಕ್ಷೇತ್ರದ 5ನೆ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜ.20ರಂದು ಇಲ್ಲಿನ ಡಾ.ಭೀಮರಾವ್ ಪ್ಯಾಲೆಸ್‌ನಲ್ಲಿ ಏರ್ಪಡಿಸಲಾಗಿದೆ ಎಂದು ಶಾಸಕ ಸುರೇಶ್‌ಕುಮಾರ್ ತಿಳಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಲನಚಿತ್ರ ನಿರ್ದೇಶಕ ಕೆ.ಎಸ್.ಭಗವಾನ್‌ರನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. 83ನೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಪ್ರೊ.ಚಂದ್ರಶೇಖರ್ ಪಾಟೀಲ್ ಜ.20ರಂದು ಬೆ.11ಕ್ಕೆ ಸಮಾರಂಭವನ್ನು ಉದ್ಘಾಟಿಸಲಿದ್ದು, ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು ಹಾಗೂ ಸಾಹಿತಿಗಳು, ಬಿಬಿಎಂಪಿ ಸದಸ್ಯರು, ಬರಹಗಾರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸಮ್ಮೇಳನದಲ್ಲಿ ವಿಚಾರಗೋಷ್ಠಿ, ಕವಿಗೋಷ್ಠಿ ಸಾಂಸ್ಕತಿಕ ಕಾರ್ಯಕ್ರಮಗಳು, ಸಮ್ಮೇಳನಾಧ್ಯಕ್ಷರ ಜೊತೆ ಸಂವಾದ, ಬಹಿರಂಗ ಅಧಿವೇಶನ ನಡೆಯಲಿವೆ. ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ರಾಜು ಹಾಗೂ ರಂಗಭೂಮಿಯ ಹಿರಿಯ ಕಲಾವಿದ ಆರ್.ಪರಮಶಿವನ್‌ಗೆ ಗೌರವ ಸಮರ್ಪಣೆ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಸಮಾರೋಪ ಸಮಾರಂಭದಲ್ಲಿ ಸಾಹಿತಿ ಡಾ.ಎಲ್.ಹನುಮಂತಯ್ಯ ಸಮಾರೋಪ ಭಾಷಣ ಮಾಡಲಿದ್ದು. ಸಂಸದ ಪಿ.ಸಿ.ಮೋಹನ್ ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸ್ಥಳೀಯ ಕಸಾಪ ಅಧ್ಯಕ್ಷ ಎಲ್.ಲೋಕೇಶ್, ಗೌರವ ಕಾರ್ಯದರ್ಶಿ ಕೃಷ್ಣಮೂರ್ತಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.







