ಕ್ರಿಕೆಟ್ ಬೆಟ್ಟಿಂಗ್: ಯುವಕನ ಬಂಧನ

ಬೆಂಗಳೂರು, ಜ.20: ಆಸ್ಟ್ರೇಲಿಯಾ-ಇಂಗ್ಲೆಂಡ್ ಏಕದಿನ ಕ್ರಿಕೆಟ್ ಪಂದ್ಯಾವಳಿ ಸಂಬಂಧ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಆರೋಪದ ಮೇಲೆ ಯುವಕನೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ನಗರದ ನವೀನ್(27) ಬಂಧಿತ ಆರೋಪಿ ಎಂದು ಪೊಲೀಸರು ಗುರುತಿಸಿದ್ದಾರೆ.
ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಪಣ್ಣ ಗಾರ್ಡನ್, ಪಟ್ಟೆಗಾರ ಪಾಳ್ಯದ ಮನೆಯೊಂದರಲ್ಲಿ ಆರೋಪಿಯು ಆಸ್ಟ್ರೇಲಿಯಾದ ಬ್ರಿಸ್‌ಬೇನ್ ನಗರದಲ್ಲಿ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ನಡೆಯುತ್ತಿದ್ದ ಏಕ ದಿನ ಕ್ರಿಕೆಟ್ ಪಂದ್ಯಾವಳಿಗೆ ಸಂಬಂಧಿಸಿದಂತೆ ಹಣವನ್ನು ಪಣವಾಗಿಟ್ಟುಕೊಂಡು ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಎನ್ನುವ ಮಾಹಿತಿ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.
ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ಸಿಸಿಬಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ತಂಡ ದಾಳಿ ನಡೆಸಿ, ಆರೋಪಿ ನವೀನ್‌ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನಿಂದ 59 ಸಾವಿರ ರೂ., ಎರಡು ಮೊಬೈಲ್ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.





