ಅನಧಿಕೃತ ಕಟ್ಟಡ ತೆರವುಗೊಳಿಸದ ಸರಕಾರದ ವಿರುದ್ಧ ಹೈಕೋರ್ಟ್ ಗರಂ

ಬೆಂಗಳೂರು, ಜ.22: ಬಂಟ್ವಾಳ ತಾಲೂಕಿನ ಕೊಲ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಕಾರಿ ಜಮೀನಿನಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿರುವ ಕಟ್ಟಡಗಳನ್ನು ತೆರೆವುಗೊಳಿಸಲು ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಹೈಕೋರ್ಟ್ ಸರಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.
ಅಬ್ದುಲ್ ಹಕಿಂ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ವಿಚಾರಣೆ ನಡೆಸಿದ ಹಂಗಾಮಿ ನ್ಯಾಯಮೂರ್ತಿ ಎಚ್.ಜಿ.ರಮೇಶ್ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್‌ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಅನಧಿಕೃತವಾಗಿ ನಿರ್ಮಿಸಿರುವ ಕಟ್ಟಡಗಳನ್ನು ತೆರವುಗೊಳಿಸಿ ಎಂದು ನಿರ್ದೇಶನ ನೀಡಿದ್ದರೂ ಏಕೆ ತೆರವುಗೊಳಿಸಿಲ್ಲ ಎಂದು ತರಾಟೆಗೆ ತೆಗೆದುಕೊಂಡಿತು. ಅಲ್ಲದೆ, ನಾಲ್ಕು ವಾರದಲ್ಲಿ ಕೊಲ್ನಾಡು ಗ್ರಾಮದಲ್ಲಿ ನಿರ್ಮಾಣವಾಗಿರುವ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಬೇಕೆಂದು ಪಿಡಿಓಗೆ ನಿರ್ದೇಶಿಸಿ ಅರ್ಜಿಯನ್ನು ಇತ್ಯರ್ಥಪಡಿಸಿತು.
ಸರಕಾರದ ಪರ ವಾದಿಸಿದ ವಕೀಲರು, ಕೊಲ್ನಾಡು ಗ್ರಾಮದ ಸರಕಾರಿ ಜಾಗದಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ ಕಟ್ಟಡಗಳನ್ನು ಈಗಾಗಲೇ ತೆರವುಗೊಳಿಸಲಾಗಿದೆ ಎಂದು ಪೀಠಕ್ಕೆ ತಿಳಿಸಿದರು. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಅರ್ಜಿದಾರರ ಪರ ವಕೀಲರು, ಕೊಲ್ನಾಡು ಗ್ರಾಮದಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿರುವ ಕಟ್ಟಡಗಳನ್ನು ತೆರವುಗೊಳಿಸಿ ಎಂದು ನ್ಯಾಯಪೀಠವು ನಿರ್ದೇಶಿಸಿದ್ದರೂ ಯಾವುದೆ ಕ್ರಮ ಕೈಗೊಂಡಿಲ್ಲ ಎಂದು ಪೀಠಕ್ಕೆ ತಿಳಿಸಿದರು.
ಅರ್ಜಿದಾರರ ವಕೀಲರ ವಾದ ಆಲಿಸಿ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠವು ಸರಕಾರಕ್ಕೆ ಎಷ್ಟು ನಿರ್ದೇಶನಗಳನ್ನು ನೀಡಿದರೂ ಪ್ರಯೋಜನವಿಲ್ಲ. ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ದಾಖಲಾದಾಗ ಹಾಗೂ ನ್ಯಾಯಪೀಠವು ಅಧಿಕಾರಿಗಳನ್ನು ಖುದ್ದು ಕೋರ್ಟ್‌ಗೆ ಕರೆಸಿಕೊಂಡಾಗ ಮಾತ್ರ ಕೆಲಸ ಮಾಡುತ್ತಾರೆಯೇ ವಿನಹ ಇಲ್ಲದಿದ್ದರೆ ಯಾವುದೆ ಕೆಲಸವನ್ನು ಮಾಡುವುದಿಲ್ಲ ಎಂದು ಸರಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿತು. ಅನಧಿಕೃತ ಕಟ್ಟಡಗಳನ್ನು ನಾಲ್ಕು ವಾರದಲ್ಲಿ ತೆರವುಗೊಳಿಸಬೇಕೆಂದು ನಿರ್ದೇಶಿಸಿ ಅರ್ಜಿಯನ್ನು ಇತ್ಯರ್ಥಪಡಿಸಿತು.







