ಮಂಗಳೂರು: ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು, ಜ.24: ಸರಕಾರಿ ನೌಕರರು ಸದಾಕಾಲ ಬಿಡುವಿಲ್ಲದ ಒತ್ತಡದಿಂದ ಕೆಲಸ ನಿರ್ವಹಿಸುವುದರ ಜೊತೆಗೆ ಅವರಿಗೆ ಸಮತೋಲಿತ ಆರೋಗ್ಯವನ್ನು ಕಾಪಾಡುವುದರ ಮೂಲಕ ಅವರ ಆಯಸ್ಸನ್ನು ವೃದ್ಧಿಸಲು ಕ್ರೀಡೆಯು ಸಹಕಾರಿಯಾಗಿದೆ ಎಂದು ಮೇಯರ್ ಕವಿತಾ ಸನಿಲ್ ಹೇಳಿದ್ದಾರೆ.
ನಗರದ ಮಂಗಳಾ ಕ್ರೀಡಾಂಗಣದಲ್ಲಿ ಬುಧವಾರ ನಡೆದ ದ.ಕ.ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ವ್ಯಾಯಾಮ, ಧ್ಯಾನ ಹಾಗೂ ಕ್ರೀಡೆಯಲ್ಲಿ ತೊಡಗಿಸಿಕೊಂಡವರು ಭವಿಷ್ಯದಲ್ಲಿ ಉತ್ತಮ ರೀತಿಯ ಆರೋಗ್ಯವನ್ನು ಹೊಂದಲು ಸಾಧ್ಯವಿದೆ. ಜತೆಯಾಗಿ ಕೆಲಸ ಮಾಡುವ ಅಧಿಕಾರಿ ಮತ್ತು ಸಿಬ್ಬಂದಿ ವರ್ಗ ಒಂದೇ ವೇದಿಕೆಯಲ್ಲಿ ಒಟ್ಟಾಗಿ ಸೇರಲು ಸಿಕ್ಕಿದ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಮೇಯರ್ ಕರೆ ನೀಡಿದರು.
ದ.ಕ. ಜಿಪಂ ಉಪಾಧ್ಯಕ್ಷೆ ಕಸ್ತೂರಿ ಪಂಜ ಮಾತನಾಡಿ ಸರಕಾರಿ ನೌಕರರ 6ನೆ ವೇತನ ಆಯೋಗವು ಶೀಘ್ರವಾಗಿ ಜಾರಿಯಾಗಲಿ ಎಂದರು. ದ.ಕ ಜಿಲ್ಲಾ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಪ್ರಕಾಶ್ ನಾಯಕ್ ಮಾತನಾಡಿದರು.
ಕಾರ್ಯಕ್ರಮದಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಪ್ರದೀಪ್ ಡಿಸೋಜ, ಕಾರ್ಪೊರೇಟರ್ ಜಯಂತಿ ಆಚಾರ್, ವಾರ್ತಾಧಿಕಾರಿ ಖಾದರ್ ಶಾ, ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಶಿವಶಂಕರ್ ಭಟ್, ಡಿ ದರ್ಜೆ ನೌಕರರ ಸಂಘದ ಅಧ್ಯಕ್ಷ ಫ್ರಾಂಕಿ ಕುಟಿನ್ಹ, ಸಹಾಯಕ ಕ್ರೀಡಾಧಿಕಾರಿ ಲಿಲ್ಲಿ ಪಾಸ್, ವಾಲಿಬಾಲ್ ತರಬೇತುದಾರ ನಾರಾಯಣ ಆಳ್ವ ಮತ್ತಿತರರು ಉಪಸ್ಥಿತರಿದ್ದರು.







