45 ದಿನಗಳಲ್ಲಿ ಖಾಸಗಿ ಬಸ್ ನಿಲ್ದಾಣ, ಇಂದಿರಾ ಕ್ಯಾಂಟೀನ್ ಕಾಮಗಾರಿ ಪೂರ್ಣ: ಸಚಿವ ಸೀತಾರಾಂ ಭರವಸೆ
ಮಡಿಕೇರಿ, ಜ.25 : ಮುಂದಿನ 45 ದಿನಗಳಲ್ಲಿ ನಗರದ ನೂತನ ಖಾಸಗಿ ಬಸ್ ನಿಲ್ದಾಣ ಕಾಮಗಾರಿ ಹಾಗೂ ಇಂದಿರಾ ಕ್ಯಾಂಟೀನ್ ಕಟ್ಟಡದ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್.ಸೀತಾರಾಮ್ ತಿಳಿಸಿದ್ದಾರೆ.
ನಗರದಲ್ಲಿ ನೂತನ ಖಾಸಗಿ ಬಸ್ ನಿಲ್ದಾಣ ಹಾಗೂ ಇಂದಿರಾ ಕ್ಯಾಂಟೀನ್ ಕಾಮಗಾರಿಯನ್ನು ಪರಿಶೀಲಿಸಿದ ಅವರು ಗುಣಮಟ್ಟವನ್ನು ಕಾಯ್ದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಎರಡೂ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಶೀಘ್ರ ಸಾರ್ವಜನಿಕರ ಉಪಯೋಗಕ್ಕೆ ಅರ್ಪಿಸಬೇಕೆನ್ನುವ ಉದ್ದೇಶ ನಮ್ಮದಾಗಿದ್ದು, ಕಾಮಗಾರಿ ಚುರುಕುಗೊಂಡಿದೆ. ಮುಂದಿನ 45 ದಿನಗಳಲ್ಲಿ ಖಾಸಗಿ ಬಸ್ ನಿಲ್ದಾಣ ಮತ್ತು ಇಂದಿರಾ ಕ್ಯಾಂಟೀನ್ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಸಚಿವರು ಇದೇ ಸಂದರ್ಭ ಸುದ್ದಿಗಾರರಿಗೆ ತಿಳಿಸಿದರು.
ಮಡಿಕೇರಿ ನಗರದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆಯಾದ ನಂತರ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಇಂದಿರಾ ಕ್ಯಾಂಟೀನ್ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಅವರು ಹೇಳಿದರು.
ನಗರಸಭಾಧ್ಯಕ್ಷರಾದ ಕೂಡಕಂಡಿ ಕಾವೇರಮ್ಮ ಸೋಮಣ್ಣ, ಜಿಲ್ಲಾಧಿಕಾರಿ ಶ್ರೀವಿದ್ಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರಪ್ರಸಾದ್, ನಗರಸಭೆ ಪೌರಾಯುಕ್ತರಾದ ಬಿ.ಶುಭ, ಸಚಿವರ ಆಪ್ತ ಕಾರ್ಯದರ್ಶಿ ಹರೀಶ್ ಬೋಪಣ್ಣ, ಕೆಪಿಸಿಸಿ ಉಪಾಧ್ಯಕ್ಷರಾದ ಮಿಟ್ಟುಚಂಗಪ್ಪ, ನಗರ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಯು.ಅಬ್ದುಲ್ ರಜಾಕ್ ಮತ್ತಿತರರು ಕಾಮಗಾರಿ ಪರಿಶೀಲನೆ ಸಂದರ್ಭ ಹಾಜರಿದ್ದರು.