ಉಡುಪಿ: ಜ.30ರಂದು ಸರಕಾರಿ ಮಹಿಳಾ ಕಾಲೇಜಿನಲ್ಲಿ ಉದ್ಯೋಗ ಮೇಳ
ಉಡುಪಿ, ಜ.27: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಡಾ.ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಇವುಗಳ ಸಂಯುಕ್ತ ಆಶ್ರಯದಲ್ಲಿ ಜ.30 ಉಡುಪಿ ಅಜ್ಜರಕಾಡಿನಲ್ಲಿರುವ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಉದ್ಯೋಗ ಮೇಳದ ಉದ್ಘಾಟನಾ ಸಮಾರಂಭ ಬೆಳಗ್ಗೆ 10 ಗಂಟೆಗೆ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟಿಸಲಿದ್ದಾರೆ.
ಈ ಉದ್ಯೋಗ ಮೇಳದಲ್ಲಿ ವಿವಿಧ ಕಂಪೆನಿ/ಸಂಸ್ಥೆಗಳು ಭಾಗವಹಿಸಿ ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿವೆ. ಖಾಸಗಿ ವಲಯದಲ್ಲಿ ಉದ್ಯೋಗಕ್ಕೆ ಆಸಕ್ತಿ ಇರುವ ಎಸ್ಸೆಸ್ಸೆಲ್ಸಿ, ಪಿಯುಸಿ, ಯಾವುದೇ ಪದವಿ, ಡಿಪ್ಲೋಮಾ, ಐಟಿಐ, ಸ್ನಾತಕೋತ್ತರ ಹಾಗೂ ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಿಸಿದ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ರೆಸ್ಯೂಮ್ (ಬಯೋಡೇಟಾ) ಇತ್ಯಾದಿ ದಾಖಲೆಗಳೊಂದಿಗೆ ಜ.30ರಂದು ಬೆಳಗ್ಗೆ ಹಾಜರಿರುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಪ್ರಕಟಣೆ ತಿಳಿಸಿದೆ.







