ಟೆಕ್ಕಿ ಅಜಿತಾಬ್ ನಾಪತ್ತೆ ಪ್ರಕರಣ: ತನಿಖಾ ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಸಿದ ಎಸ್‌ಐಟಿ
ಬೆಂಗಳೂರು, ಜ.22: ಸಾಫ್ಟ್‌ವೇರ್ ಎಂಜಿನಿಯರ್ ಕುಮಾರ್ ಅಜಿತಾಬ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(ಎಸ್‌ಐಟಿ)ವು ಹೈಕೋರ್ಟ್‌ಗೆ ತನಿಖಾ ವರದಿಯನ್ನು ಸಲ್ಲಿಸಿತು.
ಕುಮಾರ್ ಅಜಿತಾಬ್ ನಾಪತ್ತೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಅಜಿತಾಬ್ ತಂದೆ ಅಶೋಕ್ ಕುಮಾರ್ ಸಿನ್ಹಾ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರಿದ್ದ ನ್ಯಾಯಪೀಠ ನಡೆಸಿತು. ಅಜಿತಾಬ್ ಪ್ರಕರಣದ ತನಿಖಾ ವರದಿಯನ್ನು ಸ್ವೀಕರಿಸಿದ ನ್ಯಾಯಪೀಠವು ಅರ್ಜಿ ವಿಚಾರಣೆಯನ್ನು ಫೆ.2ಕ್ಕೆ ಮುಂದೂಡಿತು.
ಸರಕಾರದ ಪರ ವಾದಿಸಿದ ವಕೀಲರು, ಕುಮಾರ್ ಅಜಿತಾಬ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ಮುಂದುವರೆದಿದ್ದು, ಸದ್ಯ ಇಲ್ಲಿಯವರೆಗೆ ನಡೆಸಿರುವ ತನಿಖಾ ವರದಿಯನ್ನು ಸಲ್ಲಿಸಲಾಗಿದೆ ಎಂದು ಪೀಠಕ್ಕೆ ತಿಳಿಸಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಅರ್ಜಿ ವಿಚಾರಣೆಯನ್ನು ಫೆ.2ಕ್ಕೆ ಮುಂದೂಡಿತು.
ಪ್ರಕರಣವೇನು: ಬ್ರಿಟಿಷ್ ಟೆಲಿಕಾಂ ಕಂಪೆನಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದ ಕುಮಾರ್ ಅಜಿತಾಬ್ ಅವರು 2017ರ ಡಿ.18ರ ಸಂಜೆ 6.30ಕ್ಕೆ ನಾಪತ್ತೆಯಾಗಿದ್ದರು. ಈ ಬಗ್ಗೆ ಕುಮಾರ್ ತಂದೆ ವೈಟ್‌ಫೀಲ್ಡ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅದರಂತೆ ಪೊಲೀಸರು ಕುಮಾರ್ ಅಜಿತಾಬ್ ನಾಪತ್ತೆಯಾಗಿರುವ ಬಗ್ಗೆ 2017ರ ಡಿ.20 ಹಾಗೂ 29ರಂದು ಎರಡು ಎಫ್‌ಐಆರ್ ದಾಖಲಿಸಿದ್ದರು. ಆದರೆ, ಈವೆರಗೂ ಆತ ಪತ್ತೆಯಾಗಿಲ್ಲ. ಇದರಿಂದ ಹೈಕೋರ್ಟ್ ಮಟ್ಟಿಲೇರಿರುವ ತಂದೆ ಅಶೋಕ್ ಕುಮಾರ್ ಸಿನ್ಹಾ, ಪೊಲೀಸರು ಈವರೆಗೂ ನನ್ನ ಮಗನನ್ನು ಪತ್ತೆ ಹಚ್ಚಿಲ್ಲ. ಹೀಗಾಗಿ, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿದ್ದರು.







