ವಾಟಾಳ್, ಕೇಂದ್ರ-ರಾಜ್ಯ ಸರಕಾರಕ್ಕೆ ಹೈಕೋರ್ಟ್ ತುರ್ತು ನೋಟಿಸ್
ಬಂದ್‌ಗಳನ್ನು ನಿರ್ಬಂಧಿಸಲು ಕೋರಿ ಪಿಐಎಲ್ ಸಲ್ಲಿಕೆ

ಬೆಂಗಳೂರು, ಜ.29: ಮಹಾದಾಯಿ ನದಿ ನೀರು ಹಂಚಿಕೆ ವಿವಾದ ಸೇರಿ ಹಲವು ವಿಚಾರಗಳಿಗೆ ರಾಜ್ಯದಲ್ಲಿ ಪದೇ ಪದೇ ಬಂದ್‌ಗೆ ಕರೆ ನೀಡುತ್ತಿರುವ ಕನ್ನಡ ಚಳವಳಿ ವಾಟಾಳ್ ಪಕ್ಷವನ್ನು ನಿಷೇಧಿಸಬೇಕೆಂದು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ, ರಾಜ್ಯ ಸರಕಾರ ಹಾಗೂ ಕನ್ನಡ ಚಳವಳಿ ವಾಟಾಳ್ ಪಕ್ಷಕ್ಕೆ ಹೈಕೋರ್ಟ್ ತುರ್ತು ನೋಟಿಸ್ ಜಾರಿಗೊಳಿಸಿದೆ.
ರಾಜಾಜಿನಗರದ ಶ್ರದ್ಧಾ ಪೋಷಕರ ಸಂಘದ ಅಧ್ಯಕ್ಷ ಸಿ.ರಾಜಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ವಿಚಾರಣೆ ನಡೆಸಿದ ಹಂಗಾಮಿ ನ್ಯಾಯಮೂರ್ತಿ ಎಚ್.ಜಿ.ರಮೇಶ್ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್‌ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿತು.
ಅರ್ಜಿದಾರರ ಪರ ವಾದಿಸಿದ ವಕೀಲರು, ರಾಜ್ಯ ಬಂದ್‌ಗಳಿಗೆ ಕರೆ ನೀಡುವುದರಿಂದ ಜನಸಾಮಾನ್ಯರ ಮೂಲಭೂತ ಹಕ್ಕುಗಳಿಗೆ ಧಕ್ಕೆಯಾಗುತ್ತದೆ. ಜನಸಾಮಾನ್ಯರು ಸಂಕಷ್ಟವನ್ನು ಅನುಭವಿಸುತ್ತಾರೆ. ಶಾಲಾ ಮಕ್ಕಳಿಗೆ ತೊಂದರೆಯಾಗುತ್ತದೆ. ಕೇಂದ್ರ ಹಾಗೂ ರಾಜ್ಯ ಸರಕಾರದ ಬೊಕ್ಕಸಕ್ಕೆ ಅಪಾರ ನಷ್ಟವಾಗುತ್ತದೆ. ಹೀಗಾಗಿ, ಬಂದ್‌ಗಳನ್ನು ಕಾನೂನು ಬಾಹಿರ ಹಾಗೂ ಅಸಂವಿಧಾನಿಕ ಎಂದು ಘೋಷಿಸಬೇಕು. ಹಾಗೂ ಬಂದ್‌ಗಳನ್ನು ನಿರ್ಬಂಧಿಸಬೇಕೆಂದು ಪೀಠಕ್ಕೆ ಮನವಿ ಮಾಡಿದರು.
ಅರ್ಜಿದಾರರ ವಾದ ಆಲಿಸಿದ ನ್ಯಾಯಪೀಠವು ಬಂದ್‌ಗೆ ಕರೆ ನೀಡುವುದು ಕಾನೂನು ಬಾಹಿರ ಎಂದು ಭಾರತೀಯ ಸಂವಿಧಾನದಲ್ಲಿ ಏನಾದರು ಇದೆಯೇ ಎಂದು ಪ್ರಶ್ನಿಸಿತು. ವೈದ್ಯರ ಪ್ರತಿಭಟನೆ ಕುರಿತಂತೆ ಪ್ರಶ್ನಿಸಲು ಸಂವಿಧಾನದಲ್ಲಿ ಅವಕಾಶವಿದೆ. ಅದೇ ರೀತಿಯಾಗಿ ಬಂದ್ ಕುರಿತು ಪ್ರಶ್ನಿಸಲು ಹಾಗೂ ನಿರ್ಬಂಧಿಸಲು ಸಂವಿಧಾನದಲ್ಲಿ ಅವಕಾಶವಿದೆಯೇ ಎಂದು ಪ್ರಶ್ನಿಸಿತು.
ಈ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅರ್ಜಿದಾರರ ಪರ ವಕೀಲರು, ಸುಪ್ರೀಂಕೋರ್ಟ್‌ನಲ್ಲಿ ಈ ಸಂಬಂಧ ಸಾಕಷ್ಟು ಆದೇಶಗಳಿವೆ. ಬಂದ್ ಮೂಲಕ ಮತ್ತೊಬ್ಬರ ಮೂಲಭೂತ ಹಕ್ಕಿಗೆ ಧಕ್ಕೆಯಾಗಬಾರದು ಎಂದು ಸುಪ್ರೀಂಕೋರ್ಟ್ ಹೇಳಿದೆ ಎಂದು ಪೀಠಕ್ಕೆ ತಿಳಿಸಿದರು.
ವಕೀಲರ ವಾದ ಆಲಿಸಿದ ನ್ಯಾಯಪೀಠವು ಕೇಂದ್ರ, ರಾಜ್ಯ ಸರಕಾರ ಹಾಗೂ ಕನ್ನಡ ಚಳವಳಿ ವಾಟಾಳ್ ಪಕ್ಷಕ್ಕೆ ತುರ್ತು ನೋಟಿಸ್ ಜಾರಿಗೊಳಿಸಿ ಅರ್ಜಿ ವಿಚಾರಣೆಯನ್ನು ಫೆ.2ಕ್ಕೆ ಮುಂದೂಡಿತು.







